ಪ್ರಗತಿವಾಹಿನಿ ಸುದ್ದಿ; ಬೆಂಗಳೂರು /ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ದೇಶಾದ್ಯಂತ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಳ್ಳುತ್ತಿವೆ.
ಶುಕ್ರವಾರದ ಪ್ರಾರ್ಥನೆ ಬಳಿಕ ದೆಹಲಿ, ಮುಂಬೈ, ಹೈದರಾಬಾದ್, ಉತ್ತರಪ್ರದೇಶ, ಪ್ರಯಾಗ್ ರಾಜ್, ಕರ್ನಾಟಕದಲ್ಲಿ ಎಸ್ ಡಿಪಿಐ ಸಂಘಟನೆ ಹಾಗೂ ಮುಸ್ಲಿಂ ಮುಖಂಡರು ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಬಂಧನಕ್ಕೆ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್, ಪಶ್ಚಿಮ ಬಂಗಾಳದ ಹೌರಾ ದಲ್ಲಿ ಕಲ್ಲುತೂರಾಟ ಪ್ರಕರಣಗಳು ನಡೆದಿದ್ದು, ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ. ಶ್ರೀನಗರ, ಅಹಮದಾಬಾದ್, ಹೈದರಾಬಾದ್ ನಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರತಿಭಟನೆ ಹಿಂಸಾಚಾರಕ್ಕೂ ತಿರುಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ನಡುವೆ ಪ್ರತಿಭಟನೆ ರಾಜ್ಯಕ್ಕೂ ಕಾಲಿಟ್ಟಿದ್ದು, ಬೆಳಗಾವಿಯಲ್ಲಿ ಎಸ್ ಡಿಪಿಐ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಹಾಗೂ ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿದ ಎಸ್ ಡಿಪಿಐ ಕಾರ್ಯಕರ್ತರು, ನಗರದಲ್ಲಿ ನೂಪುರ್ ಶರ್ಮಾ ಅವರ ಪ್ರತಿಕೃತಿಯ ಕೇಬಲ್ ತಂತಿಗೆ ನೇತು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಘ್ನಗೊಳ್ಳುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದ್ದು, ಪ್ರತಿಕೃತಿ ತೆರವುಗೊಳಿಸಿದ್ದಾರೆ. ಇನ್ನೊಂದೆಡೆ ಮುಸ್ಲಿಂ ಮುಖಂದರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ, ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಈ ಮೂಲಕ ಮನವಿ ಮಾಡಿದ್ದಾರೆ.
ರೆಡ್ ಹ್ಯಾಂಡ್ ಆಗಿ ACB ಬಲೆಗೆ ಬಿದ್ದ ಕಾನ್ ಸ್ಟೇಬಲ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ