ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಇಡಿ ಸಮನ್ಸ್, ವಿಚಾರಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಕಾಂಗ್ರೆಸ್ ಪ್ರತಿಭಟನೆಗೆ ತಡೆಯೊಡ್ದಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜಭವನ ಚಲೋ ಪ್ರತಿಭಟನೆ ಆರಂಭಿಸಿದ್ದು, ರಸ್ತೆ ಮಧ್ಯೆ ಟೈರ್ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ ಇಂಡಿಯನ್ ಎಕ್ಸ್ ಪ್ರೆಸ್ ಬಳಿ ತಲುಪುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಮಧ್ಯೆ ಪ್ರತಿಭಟನಾಕಾರರನ್ನು ತಡೆದಿದ್ದಾರೆ.
ಆದರೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ, ಮಾತಿನ ಚಕಮಕಿ ನಡೆದಿದ್ದು, ನೂಕಾಟ ತಳ್ಳಾಟ ಆರಂಭವಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪೊಲೀಸರು ಪ್ರತಿಭಟನಾಕರರನ್ನು ತಡೆಯುತ್ತಿದ್ದಂತೆ ಇಂಡಿಯನ್ ಎಕ್ಸ್ ಪ್ರೆಸ್ ಬಳಿ ನಡು ರಸ್ತೆಯಲ್ಲೇ ಕುಳಿತ ಮಾಜಿ ಸಿಎಂ ಸಿದ್ದರಾಮಯ್ಯ ಧರಣಿ ನಡೆಸಿದರು. ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್ ನೂರಾರು ನಾಯಕರು ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಅರಿತ ಪೊಲೀಸರು ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರನ್ನು, ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸ್ ನಲ್ಲಿ ತುಂಬಿ ಕರೆದೊಯ್ದಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸಮನ್ಸ್ ಜಾರಿ ಮಾಡಿದ್ದು, ಕಳೆದ ಮೂರು ದಿನಗಳಿಂದ ನಿರಂತರ ವಿಚಾರಣೆ ನಡೆಸಿದೆ. ಇಂದು ಒಂದು ದಿನ ವಿಶ್ರಾಂತಿಗಾಗಿ ಅವಕಾಶ ನೀಡಿದ್ದು, ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಮತ್ತೊಂದು ಸಮನ್ಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಡಿ ವಿಚಾರಣೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
ರಾಹುಲ್ ಗಾಂಧಿಗೆ ಇಡಿ ವಿಚಾರಣೆ; ಕಾಂಗ್ರೆಸ್ ನಿಂದ ರಾಜಭವನ ಮುತ್ತಿಗೆ ಹಾಕಲು ಕರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ