ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ, ರಘುರಾಮ ರೆಡ್ಡಿ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ವಿರುದ್ಧ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬುಧವಾರ ಮತದಾನ ಪ್ರಕ್ರಿಯೆ ಮುಕ್ತಾಯವಾಗುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪಾರೆಡ್ಡಿ ಕಾರಿನಲ್ಲಿ ಮತದಾನ ಕೇಂದ್ರದ ಕಾಂಪೌಂಡ್ ಒಳಗೆ ಬಂದಿದ್ದರು. ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ವೀರೇಂದ್ರ ಪಪ್ಪಿ ಆಕ್ಷೇಪಿಸಿದ್ದರು. ಈ ಸಂಬಂಧ ಇಬ್ಬರ ನಡುವೆ ವಾಗ್ವಾದ ನಡೆದು ಬೆಂಬಲಿಗರ ಮಧ್ಯೆ ಘರ್ಷಣೆಗೆ ಕಾರಣವಾಗಿತ್ತು.
ಈ ವೇಳೆ ಸಿದ್ದಾಪುರದ ನಾಗರಾಜ್ ಎಂಬವರು ಗಲಾಟೆ ಬಿಡಿಸಲು ಹೋದಾಗ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿ, ಜಾತಿನಿಂದನೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನಾಗರಾಜ್, ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ, ರಘುರಾಮರೆಡ್ಡಿ ಮತ್ತು ಇತರರ ವಿರುದ್ಧ ದೂರು ದಾಖಲಿಸಿಸಲಾಗಿದ್ದು ತನಿಖೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ