Cancer Hospital 2
Laxmi Tai Society2
Beereshwara add32

ಬೆಳಗಾವಿಯಲ್ಲಿ ಫೆ.5ರಂದು “ಗ್ಯಾರಂಟಿ ಯೋಜನೆ” ಫಲಾನುಭವಿಗಳ ಬೃಹತ್ ಸಮಾವೇಶ

Anvekar 3

ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸರಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶವನ್ನು ನಗರದ ಸರದಾರ ಹೈಸ್ಕೂಲ್ ಮೈದಾನದಲ್ಲಿ ಫೆ.೫ ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ(ಫೆ೨) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಗ್ಯಾರಂಟಿ ಯೋಜನೆಗಳ ಕುರಿತು ಸಮಾವೇಶ ನಡೆಸಲಾಗುವುದು. ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಲಾಗುವುದು.

ಫಲಾನುಭವಿಗಳನ್ನು ಗುರುತಿಸಿ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ನೀಡಿದರು.

ಪೊಲೀಸ್ ಇಲಾಖೆಯ ಅಧಿಕಾರಿಗಳು ಸಂಚಾರ ನಿರ್ವಹಣೆ: ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು.
ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಅಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಮಾತನಾಡಿದ ಶಾಸಕ ಆಸಿಫ್(ರಾಜು) ಸೇಠ್ ಅವರು, ಪ್ರತಿವರ್ಷ ಸರಕಾರದಿಂದ ೬೦ ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಆದ್ದರಿಂದ ಎಲ್ಲ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಯೋಜನೆಗಳ ಬಗ್ಗೆ ಇನ್ನಷ್ಟು ಅರಿವು ಮೂಡಿಸುವ ಕಾರಣಕ್ಕೆ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದರು.

Emergency Service

ಬೆಳಗಾವಿ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರಗಳಲ್ಲಿರುವ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಸಮಾವೇಶಕ್ಕೆ ಆಹ್ವಾನಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಗೃಹಲಕ್ಷ್ಮೀ ಮಾತ್ರವಲ್ಲದೇ ಇತರೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಕರೆತರಬೇಕು ಎಂದರು. ಇದಕ್ಕಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಸಮನ್ವಯಕ್ಕಾಗಿ ನಿಯೋಜಿಸಬೇಕು ಎಂದರು.

ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ, ಸಮಾವೇಶಕ್ಕೆ ಆಗಮಿಸುವ ಫಲಾನುಭವಿಗಳಿಗೆ ಊಟೋಪಹಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ್, ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಮಾವೇಶದ ಸಿದ್ಧತೆ ಪರಿಶೀಲನೆ:
ಪೂರ್ವಭಾವಿ ಸಭೆಯ ಬಳಿಕ ಸರದಾರ ಹೈಸ್ಕೂಲ್ ಮೈದಾನಕ್ಕೆ ಭೇಟಿ ನೀಡಿದ ಶಾಸಕ ಆಸಿಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದರು.

ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಲಿರುವುದರಿಂದ ಊಟ, ಕುಡಿಯುವ ನೀರು, ಪಾರ್ಕಿಂಗ್ ಮತ್ತಿತರ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಗರದಲ್ಲಿಯೇ ಸಮಾವೇಶ ನಡೆಯಲಿರುವುದರಿಂದ ಗ್ಯಾರಂಟಿ ಯೋಜನೆ ಫಲಾನುಭವಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಆಸಿಫ್ ಸೇಠ್ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಭಾನುವಾರ(ಫೆ.4) ಸರದಾರ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಸಿದ್ಧತೆಯನ್ನೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪರಿಶೀಲಿಸಿದರು.
ಶಾಸಕ ಆಸಿಫ್(ರಾಜು) ಸೇಠ್, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ಗಂಗಾಮತಸ್ಥ ಸಮಾಜದ ಜಿಲ್ಲಾಧ್ಯಕ್ಷ ದಿಲೀಪ್ ಕುರಂದವಾಡೆ ಹಾಗೂ ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Gokak Jyotishi add 8-2
Bottom Add3
Bottom Ad 2

You cannot copy content of this page