
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ವರದಾಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಎಲ್ಲ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ತಾಲ್ಲೂಕಿನ ವರದಾಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದೆ. ಈ ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು ಎಂಬ ಮಾಹಿತಿ ದೊರೆತಿದೆ.
ಘಟನಾ ಸ್ಥಳಕ್ಕೆ ಹಾವೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ