CrimeKannada NewsKarnataka News

*ಪೋಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಗುಂಡೇಟು*

ಪ್ರಗತಿವಾಹಿನಿ ಸುದ್ದಿ: ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಬೆಂಗಳೂರು ನಗರದ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಸೋಮಸುಂಡ್ರಪಾಳ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಮಾರಕಾಸ್ತ್ರದೊಂದಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಬಂಡೆಪಾಳ್ಯ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಸಿಗುತ್ತಿದ್ದಂತೆಯೇ ಬಂಡೆಪಾಳ್ಯ ಠಾಣೆಯ ಪಿಎಸ್‌ಐ ಸಚಿನ್ ಹಾಗೂ ಸಿಬ್ಬಂದಿ ಸಂದೀಪ್ ಕಾಂಬ್ಳೆ ತಕ್ಷಣ ಸ್ಥಳಕ್ಕೆ ಧಾವಿಸಿದರು.

ಮಧ್ಯರಾತ್ರಿ ಸುಮಾರು 12.50ರ ವೇಳೆಗೆ ಪೊಲೀಸರು ಆರೋಪಿ ಜಿಶಾನ್‌ನನ್ನು ವಶಕ್ಕೆ ಪಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ, ತನ್ನ ಬಳಿಯಿದ್ದ ಮಾರಕಾಸ್ತ್ರದಿಂದ ಸಿಬ್ಬಂದಿ ಸಂದೀಪ್ ಕಾಂಬ್ಳೆ ಅವರ ಮೇಲೆ ಭೀಕರ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ, ಆತ ಪಿಎಸ್‌ಐ ಸಚಿನ್ ಅವರ ಮೇಲೆಯೂ ಹಲ್ಲೆಗೆ ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪಿಎಸ್‌ಐ ಸಚಿನ್ ಅವರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ಸಂದೀಪ್ ಕಾಂಬ್ಳೆ ಹಾಗೂ ಕಾಲಿಗೆ ಗುಂಡೇಟು ಬಿದ್ದ ಆರೋಪಿ ಜಿಶಾನ್ ಇಬ್ಬರನ್ನೂ ಚಿಕಿತ್ಸೆಗಾಗಿ ತಕ್ಷಣವೇ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button