Belagavi NewsBelgaum NewsKannada NewsKarnataka NewsPolitics

*ಬೈಲಹೊಂಗಲದಲ್ಲಿ ಗುಡ್ಡ ನುಂಗಿದ ಗುಪ್ತ ಸಾಮ್ರಾಜ್ಯದ ವಿರುದ್ಧ ಕ್ರಮ ಆಗಲಿ: ಬಿಜೆಪಿ–ಜೆಡಿಎಸ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನೀಲಗಿರಿ ಮರಗಳನ್ನು ಕಡಿದು ಕಲ್ಲು, ಮಣ್ಣು ತೆಗೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ.

ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಬೈಲಹೊಂಗಲ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಹಾಗೂ ಜೆಡಿಎಸ್ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಮುರಗೋಡ ವ್ಯಾಪ್ತಿಯ ಸರ್ವೆ ನಂ.613 ಮತ್ತು 855ರ ಸರ್ಕಾರಿ ಜಮೀನಿನಲ್ಲಿ ಸುಮಾರು 25 ತಿಂಗಳಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿದರು.

ಹಲಕಿ ಗ್ರಾಮದ ಸಮೀಪದ ಪ್ರಥಮೇಶ ಎಂ.ಸ್ಯಾಂಡ್ ಹಾಗೂ ಪ್ರಿನ್ಸ್ ಎಂ.ಸ್ಯಾಂಡ್ ಘಟಕಗಳ ಬಳಿ ಮತ್ತು ರಾಮಾಪುರ ರಸ್ತೆಯ ಪಕ್ಕದಲ್ಲಿರುವ ಗಾಯರಾಣ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಅವರು ದೂರಿದರು.

ಈ ಸಂಬಂಧ 2024ರಲ್ಲೇ ಮುರಗೋಡ ಪೊಲೀಸ್, ಗ್ರಾಮ ಆಡಳಿತಾಧಿಕಾರಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರಿಗೆ ಲಿಖಿತ ದೂರು ನೀಡಲಾಗಿತ್ತು. ಸರ್ಕಾರಿ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಕೂಡ ಅಧಿಕಾರಿಗಳಿಗೆ ಸಲ್ಲಿಸಿದ್ದರೂ ಇದುವರೆಗೆ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ವೆ ನಂ.613ರಲ್ಲಿ ಒಟ್ಟು 46 ಎಕರೆ ಜಮೀನಿದ್ದು, ಸರ್ವೆ ನಂ.855ರ ಸುಮಾರು 11 ಎಕರೆ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ಕಡಿದು ಗಣಿಗಾರಿಕೆ ನಡೆಸಲಾಗಿದೆ ಎಂದು ಆರೋಪಿಸಿದರು. ಈ ಪ್ರದೇಶ ಅರಣ್ಯ ಇಲಾಖೆಗೆ ಸಂಬಂಧಿಸಿದೆ ಎಂಬ ದಾಖಲೆಗಳನ್ನೂ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಅಕ್ರಮವಾಗಿ ಕಲ್ಲು, ಮಣ್ಣು ಹಾಗೂ ಗರಸು ಸಾಗಿಸಲು ಲಾರಿಗಳನ್ನು ಬಳಸಲಾಗುತ್ತಿದೆ. ವಾಹನಗಳ ಸಂಖ್ಯೆ ಸೇರಿದಂತೆ ದೂರು ನೀಡಿದ್ದರೂ ಒಂದೇ ಒಂದು ಲಾರಿಗೆ ಎಫ್‌ಐಆರ್ ದಾಖಲಿಸಲಾಗಿದೆ. ಉಳಿದ ವಾಹನಗಳ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಅವರು ಪೊಲೀಸರನ್ನು ಪ್ರಶ್ನಿಸಿದರು.

ಕಂದಾಯ, ಪೊಲೀಸ್, ಅರಣ್ಯ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಆರ್‌ಟಿಒ ಇಲಾಖೆಗಳ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಇದುವರೆಗೆ ಪರಿಣಾಮಕಾರಿ ಕ್ರಮವಾಗಿಲ್ಲ ಎಂದು ಡಾ. ವಿಶ್ವನಾಥ ಪಾಟೀಲ ಆರೋಪಿಸಿದರು. ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಒಳಗಾಗಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪವನ್ನೂ ಅವರು ಮಾಡಿದರು.

ಆಗಸ್ಟ್ 20ರಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ ದಾಖಲೆಗಳನ್ನು ಸಲ್ಲಿಸಲಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಹೇಳಿದರು.

“ಸ್ಥಳದಲ್ಲಿ ಈಗಲೂ ಎರಡು ಹಿಟಾಚಿ ಯಂತ್ರಗಳು ಹಾಗೂ 12 ಟಿಪ್ಪರ್ ಲಾರಿಗಳು ಕಾರ್ಯನಿರ್ವಹಿಸುತ್ತಿವೆ. ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಬೇಕು” ಎಂದು ಅವರು ಒತ್ತಾಯಿಸಿದರು.

ಇನ್ನೂ ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದ ದಾಖಲೆಗಳೊಂದಿಗೆ ವಿಧಾನಸೌಧದಲ್ಲಿ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಅಗತ್ಯವಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಶಂಕರ ಮಾಡಲಗಿ ಎಚ್ಚರಿಕೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button