ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣರಾಜ್ಯೋತ್ಸವ ದಿನಾಚರಣೆಯನ್ನು ಸಡಗರ-ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಜ.3) ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನೇವರಿ- 26 ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಪ್ರತಿ ವರ್ಷದಂತೆ ಸಂಭ್ರಮದಿಂದ ಆಚರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಸಂದೇಶವನ್ನು ನೀಡಲಿದ್ದಾರೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರ್ಪಡಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಸೂಚಿಸಿದರು.
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.
ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ 9.00 ಗಂಟೆಯೊಳಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ತಿಳಿಸಿದರು.
ವಿಜೃಂಭಣೆಯ ಗಣರಾಜ್ಯೋತ್ಸವ ದಿನಾಚರಣೆಗಾಗಿ ನಗರದ ಎಲ್ಲ ಶಾಲಾ,ಕಾಲೇಜು, ವಸತಿ ನಿಲಯದ ವಿಧ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯವಾಗಿ ಕರೆತರುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ದಿನದಂದು ಜರುಗಲಿರುವ ಪಥ ಸಂಚಲನ, ಧ್ವಜಾರೋಹಣ, ವೇದಿಕೆ ಸಿದ್ದತೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖೆಗಳು ಸಮರ್ಪಕವಾಗಿ ನಿರ್ವಹಿಸಬೇಕು.
ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದನ್ವಯ ಗಣ್ಯರುಗಳಿಗೆ ಸಾಕಷ್ಟು ಮುಂಚಿತವಾಗಿ ತಲುಪಿಸುವಂತೆ ತಿಳಿಸಿದರು.
ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದಂದು ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಸಿಬ್ಬಂದಿಗಳ ನಿಯೋಜನೆ ಜತೆಗೆ ಕುಡಿಯುವ ನೀರು ಪೂರೈಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನರ ಹಾಗೂ ಸನ್ಮಾನಿತರಿಗೆ ಸನ್ಮಾನಿಸುವ ಕುರಿತು ಚರ್ಚಿಸಲಾಯಿತು.
ಪ್ಲಾಸ್ಟಿಕ್ ಧ್ವಜ, ಬಂಟಿಂಗ್ಸ್ ನಿಷೇಧ:
ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪ್ಲಾಸ್ಟಿಕ್ ಧ್ವಜ ಹಾಗೂ ಬಂಟಿಂಗ್ಸ್ ಗಳ ಮಾರಾಟ ಹಾಗೂ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿಯೂ ಸಹ ಪ್ಲಾಸ್ಟಿಕ್ ಧ್ವಜ ಹಾಗೂ ಬಂಟಿಂಗ್ಸ್ ಗಳನ್ನು ಬಳಸದಂತೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರು ಮಾತನಾಡಿ, ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ಹಾಗೂ ತಾಲೂಕು ಕಚೇರಿಗಳಲ್ಲಿ ಶಿಷ್ಟಾಚಾರದನ್ವಯ ಕಾರ್ಯಕ್ರಮ ಆಯೋಜಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ನಗರ ಸೇವಕರು, ಜಂಟಿ ಕೃಷಿ ನಿರ್ದೆಶಕರಾದ ಶಿವನಗೌಡ ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಮಲ್ಲಿಕಾರ್ಜುನ ಕಲಾದಗಿ, ಕ್ರೀಡಾ ಇಲಾಖೆ ಉಪನಿರ್ದೆಶಕ ಬಿ.ಶ್ರೀನಿವಾಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿಧ್ಯಾವತಿ ಭಜಂತ್ರಿ, ಗಣ್ಯರುಗಳಾದ ಶ್ರೀನಿವಾಸ ತಾಳೂಕರ, ಆನಂದ ಲೋಕರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ