*ವಿಶ್ವಕರ್ಮ ಜಯಂತಿ ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ನಿರ್ದೇಶನದಂತೆ ವಿಶ್ವಕರ್ಮ ಜಯಂತಿಯನ್ನು ಸೆ. 17 ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸರ್ವ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಸೆ.09) ನಡೆದ ವಿಶ್ವಕರ್ಮ ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ. 17 ರಂದು ಜರುಗಲಿರುವ ವಿಶ್ವಕರ್ಮ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ಅದರಂತೆ ಎಲ್ಲ ತಾಲೂಕು ಹಾಗೂ ಗ್ರಾಮ ಪಂಚಾಯತ ಮಟ್ಟದಲ್ಲಿಯೂ ಕಾರ್ಯಕ್ರಮ ಆಯೋಜಿಸುವಂತೆ ನಿರ್ದೇಶನ ನೀಡಿದರು. ಜಿಲ್ಲಾ ಮಟ್ಟದಲ್ಲಿ ಜರುಗಲಿರುವ ಕಾರ್ಯಕ್ರಮಕ್ಕೂ ಮುನ್ನ ವಿಶ್ವಕರ್ಮರ ಭಾವಚಿತ್ರದ ಮೆರವಣಿಗೆಯನ್ನು ಸಂಗೋಳ್ಳಿ ರಾಯಣ್ಣ ವೃತ್ತದಿಂದ ಕುಮಾರ ಗಂಧರ್ವ ಕಲಾ ಮಂದಿರದವರೆಗೆ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮೆರವಣಿಗೆಯಲ್ಲಿ ಜಾನಪದ ಕಲಾ ತಂಡಗಳು ಪಾಲ್ಗೊಳ್ಳುವಂತೆ ಕ್ರಮ ವಹಿಸಲು ತಿಳಿಸಿದರು.
ಕುಮಾರ ಗಂಧರ್ವ ರಂಗಮಂದಿರದಲ್ಲಿ ಜರುಗಲಿರುವ ವೇದಿಕೆ ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಲು ನುರಿತ ಸಂಪನ್ಮೂಲ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಕಾರ್ಯಕ್ರಮದ ಕುರಿತು ಆಮಂತ್ರಣ ಪತ್ರಿಕೆಯನ್ನು ಸಾಕಷ್ಟು ಮುಂಚಿತವಾಗಿ ಮುದ್ರಿಸಿ ಗಣ್ಯರುಗಳಿಗೆ ತಲುಪಿಸಬೇಕು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶಿಷ್ಟಾಚಾರದನ್ವಯ ಮುದ್ರಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿಯೂ ಸಹ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಲು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ನಿರ್ದೇಶನ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಸಮಾಜದ ಗಣ್ಯರುಗಳಾದ ರಮೇಶ ದೇಸೂರಕರ, ಮಂಜುನಾಥ ಬಡಿಗೇರ, ಕೆ.ಬಿ.ಸಾವಗಾಂವ, ಎ.ಕೆ ಸುತಾರ, ಮಂಜುಳಾ ಸಾಲಿ ಸೇರಿದಂತೆ ಸಮಾಜದ ಮುಖಂಡರು, ಗಣ್ಯರುಗಳು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ