Kannada NewsKarnataka News

36 ವರ್ಷ ನಂತರ ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ

36 ವರ್ಷ ನಂತರ ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ

ಪ್ರಗತಿವಾಹಿನಿ ಸುದ್ದಿ, ಗೋಕಾಕ –
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ರೈತ ನಾಯಕ ಬಿ.ಎಸ್. ಯಡಿಯೂರಪ್ಪನವರನ್ನು ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಸಂಜೆ ಪ್ರತಿಕ್ರಿಯೆ ನೀಡಿರುವ ಅವರು, ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಇಡೀ ರಾಜ್ಯದ ಜನತೆಗೆ ಖುಷಿ ತಂದಿದೆ. ಮೊದಲಿನಿಂದಲೂ  ಹೋರಾಟಗಾರರಾಗಿರುವ ಯಡಿಯೂರಪ್ಪ ಮುಂದಿನ ದಿನಗಳಲ್ಲಿ ರಾಜ್ಯವನ್ನು ಪ್ರಗತಿಪಥದತ್ತ ಕೊಂಡೊಯ್ಯಲಿದ್ದಾರೆ ಎಂದು ಅವರು ಆಶಿಸಿದ್ದಾರೆ.
ರಾಜ್ಯದಲ್ಲಿ 1983ರ ನಂತರ ಅಂದರೆ 36 ವರ್ಷಗಳ ನಂತರ ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ರಚನೆಯಾಗಿರುವುದು ಈ ಬಾರಿಯ ವಿಶೇಷವಾಗಿದೆ. ಈ ಹಿಂದೆ ರಾಜ್ಯ ಹಾಗೂ ಕೇಂದ್ರದಲ್ಲಿ ಬೇರೆ-ಬೇರೆ ಸರ್ಕಾರಗಳು ಆಡಳಿತ ನಡೆಸುತ್ತಿದ್ದರಿಂದ ಹೇಳಿಕೊಳ್ಳುವಂತಹ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರಲಿಲ್ಲ.

ಆದರೀಗ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರಗಳು ಅಸ್ಥಿತ್ವಕ್ಕೆ ಬಂದಿರುವುದರಿಂದ ರಾಜ್ಯಕ್ಕೆ ಒಳ್ಳೆಯದಾಗಲಿದೆ.

ಜನಪರ ಹಾಗೂ ರೈತಪರ ಆಡಳಿತಕ್ಕೆ ಒತ್ತು ನೀಡಲಿರುವ ನಮ್ಮ ಸರ್ಕಾರಗಳು, ಕರ್ನಾಟಕದಲ್ಲೀಗ ಶುಕ್ರದೆಸೆ ಆರಂಭವಾಗಿದ್ದು, ಬಿ.ಎಸ್. ಯಡಿಯೂರಪ್ಪನವರ ದಕ್ಷ ಹಾಗೂ ಪಾರದರ್ಶಕ ಆಡಳಿತದಿಂದ ಇಡೀ ಕರ್ನಾಟಕದ ಚಿತ್ರಣವೇ ಬದಲಾಗಲಿದೆ.

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ಲಭಿಸಲಿದ್ದು, ಇದರಿಂದ ರಾಜ್ಯವು ಸರ್ವತೋಮುಖ ಅಭಿವೃದ್ಧಿಯನ್ನು ಹೊಂದಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button