*ಅಕ್ಕಪಡೆ ಸಿಬ್ಬಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾರ್ಗದರ್ಶನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ‘ಅಕ್ಕಪಡೆ’ ಯೋಜನೆಗೆ ಬೆಳಗಾವಿ ಜಿಲ್ಲೆಯಿಂದ ನೇಮಕಗೊಂಡಿರುವ ಗೃಹರಕ್ಷಕ ದಳದ ಸಿಬ್ಬಂದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ಗೃಹ ಕಚೇರಿಗೆ ಆಗಮಿಸಿ, ಹೊಸ ವರ್ಷದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಅಕ್ಕಪಡೆ ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ಸಚಿವರು ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು.
ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು ಅಕ್ಕಪಡೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಮಹಿಳೆಯರನ್ನು, ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿನಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇವರು ನಮ್ಮವರು ಎನ್ನುವ ಭಾವನೆ ಅವರಲ್ಲಿ ಬಂದು ತಮ್ಮ ಸಮಸ್ಯೆಗಳನ್ನು ನಿಮ್ಮ ಬಳಿ ಹೇಳಿಕೊಳ್ಳುವಂತಹ ವಾತಾವರಣ ನಿರ್ಮಾಣ ಮಾಡಬೇಕೆಂದು ಸಚಿವರು ತಿಳಿಸಿದರು.
ಈ ವೇಳೆ ಗೃಹರಕ್ಷಕ ದಳದ ಅಧಿಕಾರಿಗಳು, ಅಕ್ಕಪಡೆಗೆ ನೇಮಕವಾದ ಗೃಹ ರಕ್ಷಕಿಯರು ಉಪಸ್ಥಿತರಿದ್ದರು.




