*ಸುಗಮ ಅಧಿವೇಶನಕ್ಕಾಗಿ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಮೊಹಮ್ಮದ ರೋಷನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ವಸತಿ, ಸಾರಿಗೆ, ಊಟೋಪಹಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶುಕ್ರವಾರ (ಡಿ.6) ಜರುಗಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಸುಗಮ ಅಧಿವೇಶನಕ್ಕಾಗಿ ಈಗಾಗಲೇ ಹತ್ತು ಸಮಿತಿಗಳನ್ನು ರಚಿಸಲಾಗಿದೆ. ಶಾಸಕರು, ಸಚಿವರು, ಅಧಿಕಾರಿ, ಸಿಬ್ಬಂದಿಗಳ ವಸತಿಗಾಗಿ ಖಾಸಗಿ ಹೋಟೆಲ್, ಅತಿಥಿಗೃಹ, ಪ್ರವಾಸಿಮಂದಿರಗಳಲ್ಲಿ ಒಟ್ಟಾರೆ 2756 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.
ಕಲಾಪಗಳ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಎಂಟು ಕಡೆಗಳಲ್ಲಿ ಪಾವತಿ ಆಧಾರದ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗಿದ್ದು, ಮಹಿಳಾ ಸ್ವ-ಸಹಾಯ ಸಂಘಗಳು ಸೇರಿದಂತೆ ವಿವಿಧ ಬಗೆಯ ಸಂಸ್ಥೆಗಳಿಗೆ 38 ಸ್ಟಾಲ್ ಗಳಿಗೂ ಅವಕಾಶ ಮಾಡಿಕೊಡಲಾಗುತ್ತಿದೆ.
ಸುವರ್ಣ ವಿಧಾನಸೌಧದಲ್ಲಿ ಬಿ.ಎಸ್.ಎನ್.ಎಲ್. ಸೇರಿದಂತೆ ಎಲ್ಲ ಖಾಸಗಿ ಸಂಸ್ಥೆಗಳಿಂದ ಅತ್ಯುತ್ತಮ ಅಂತರ್ಜಾಲ ಸಂಪರ್ಕ ಕಲ್ಪಿಸಲಾಗಿದೆ ಎಂದರು.
ಅಧಿವೇಶನ ಕಾರ್ಯಕ್ಕೆ ವಿವಿಧ ಜಿಲ್ಲೆಗಳಿಂದ ವಿವಿಧ ಮಾದರಿ ವಾಹನಗಳನ್ನು ತರಿಸಲಾಗುತ್ತದೆ. ವಾಹನ ಚಾಲಕರಿಗೆ ಡಿ.ಟಿ.ಆಯ್, ಕ್ರೀಡಾ ಹಾಸ್ಟೆಲ್ ಹಾಗೂ ಅಂಬೇಡ್ಕರ್ ಭವನದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಜೊತೆಗೆ ಖಾಸಗಿ ವಾಹನಗಳನ್ನು ಕೂಡ ಬಳಸಿಕೊಳ್ಳಲಾಗುವದು ಎಂದರು.
ಜನಪ್ರತಿನಿಧಿಗಳ ಭೇಟಿಗೆ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆನ್ ಲೈನ್ ಪಾಸ್ ವ್ಯವಸ್ಥೆ ಮಾಡಲಾಗಿದೆ. ಜನಪ್ರತಿನಿಧಿಗಳ ಸಿಬ್ಬಂದಿಗೆ ಪಾಸ್ ನೀಡಲು ಪೋರ್ಟಲ್ ಸೃಷ್ಟಿಸಲಾಗಿದೆ.
ಗಾಂಧೀ ಭಾರತ: ಛಾಯಾಚಿತ್ರ ಪ್ರದರ್ಶನ:
1924 ರಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಛಾಯಾಚಿತ್ರ ಪ್ರದರ್ಶನ ಕೂಡ ಆಯೋಜಿಸಲಾಗಿದೆ. ಶಾಲಾ ಮಕ್ಕಳಿಗೆ ಆಡಿಟೋರಿಯಂ ನಲ್ಲಿ ಚರ್ಚಾಕೂಟ, ಭಾಷಣ, ಕಿರುಚಿತ್ರ ಪ್ರದರ್ಶನ ಸೇರಿದಂತೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
ಅಲ್ಲದೇ ಬೆಳಗಾವಿ ನಗರದ ಮೂವತ್ತು ವೃತ್ತಗಳಲ್ಲಿ ಡಿ.9. ರಿಂದಲೇ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
ಕಾಂಗ್ರೆಸ್ ಶತಮಾನೋತ್ಸವ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿಗಳು 24 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು ಅಲ್ಪಾವಧಿ ಮತ್ತು ದೀರ್ಘಾವಧಿಯ ವಿವಿಧ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಸುವರ್ಣ ವಿಧಾನಸೌಧ ಬಳಿ ಸೈನ್ಸ್ ಪಾರ್ಕ್ ಉದ್ಘಾಟನೆಗೆ ಸಿದ್ಧಗೊಳಿಸಲಾಗಿದ್ದು, ಇದರಲ್ಲಿ ಚಟುವಟಿಕೆ ಆಧಾರಿತ ಕಲಿಕೆಗೆ ಅನುಕೂಲವಾಗುವಂತೆ ವಿಜ್ಞಾನ ಪಾರ್ಕ್ ವಿನ್ಯಾಸಗೊಳಿಸಲಾಗಿದೆ.
ಪ್ರತಿಭಟನೆಗೆ ಸಿದ್ಧರಾಗಿದ್ದ ವಿವಿಧ ಸಂಘಟನೆಗಳ ಜತೆ ಚರ್ಚಿಸಿ ಅವರ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದೆ. ಕೆಲ ಸಂಘಟನೆಗಳ ಜತೆ ಚರ್ಚಿಸಿ ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲಾಗಿದೆಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಪೋಲಿಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಮಾತನಾಡಿ, ಅಧಿವೇಶನದ ಭದ್ರತೆಗಾಗಿ 6000 ಕ್ಕೂ ಅಧಿಕ ಪೋಲಿಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಅಧಿವೇಶನ ಭದ್ರತೆಗಾಗಿ ನಿಯೋಜಿತ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗುವದು. ಈ ಬಾರಿ ಪ್ರತಿಭಟನೆ ಕುರಿತು 55 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ