CrimeKannada NewsKarnataka NewsLatest

*ಮೃತದೇಹಗಳ ಅಕ್ರಮ ಸಾಗಾಟ ಆರೋಪ*: *200ರಿಂದ 500ಕ್ಕೆ ಮಾರಾಟ, ಮೂವರ ಬಂಧನ*

ಪ್ರಗತಿವಾಹಿನಿ ಸುದ್ದಿ: ಸ್ಮಶಾನದಲ್ಲಿ ಹೂಳಲಾಗಿದ್ದ ಮೃತದೇಹಗಳು ಮತ್ತು ಅಸ್ತಿಪಂಜರಗಳನ್ನು ಅಕ್ರಮವಾಗಿ ಖಾಸಗಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಂತ್ರಾಲಯ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದ್ದು, ಮೃತದೇಹಗಳನ್ನು ಕೇವಲ 200ರಿಂದ 500 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.

ರಾಯಚೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿ ಹೂಳಲಾಗಿದ್ದ ಮೃತದೇಹಗಳನ್ನು ಹೊರತೆಗೆದು ಖಾಸಗಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗುತ್ತಿತ್ತು. ಅಷ್ಟೇ ಅಲ್ಲದೆ, ಮೃತದೇಹಗಳನ್ನು ದೊಡ್ಡ ಕಲ್ಲುಗಳಿಂದ ತುಂಡರಿಸಿ ಅಂಗಾಂಗಗಳನ್ನು ಬೇರ್ಪಡಿಸಲಾಗುತ್ತಿತ್ತು. ಈ ಕೃತ್ಯಕ್ಕೆ ಸಂಬಂಧಿಸಿದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಮೃತದೇಹಗಳನ್ನು 200ರಿಂದ 500 ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು ಮತ್ತು ಅವುಗಳನ್ನು ವೈದ್ಯಕೀಯ ವಿದ್ಯಾರ್ಥಿಗಳ ಬಳಕೆಗೆ ಕೊಂಡೊಯ್ಯಲಾಗುತ್ತಿತ್ತು. ಈ ಬಗ್ಗೆ ಅನುಮಾನಗೊಂಡ ಸ್ಥಳೀಯರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳೀಯರು ಖಾಸಗಿ ವೈದ್ಯಕೀಯ ಕಾಲೇಜಿನ ಇಬ್ಬರು ಸಿಬ್ಬಂದಿ ಹಾಗೂ ಸ್ಮಶಾನದ ಸಿಬ್ಬಂದಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಮಶಾನದ ಸಿಬ್ಬಂದಿ ವೀರೇಶ್ ಹಾಗೂ ಕಾಲೇಜಿನ ಸಿಬ್ಬಂದಿ ರಾಜು ಮತ್ತು ಅಪ್ಸರ್ ಮೃತದೇಹಗಳನ್ನು ತೆಗೆದುಕೊಂಡು ಹೋಗುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನೇತಾಜಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳ ಅಕ್ರಮ ಸಾಗಾಟದ ಆರೋಪದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇಂತಹ ಕೃತ್ಯಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button