Kannada NewsKarnataka NewsLatestPolitics

*ಯುಪಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ UCC ಜಾರಿ*: *ಅಮಿತ್ ಶಾ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ಲಕ್ನೋದಲ್ಲಿ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಮೂರನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ UCC ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1990ರ ಅಕ್ಟೋಬರ್ 30ರಂದು ಅಯೋಧ್ಯೆಯಲ್ಲಿ ರಾಮಭಕ್ತರ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಸ್ತಾಪಿಸಿದ ಅವರು, ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಯಾವ ಮುಖ ಇಟ್ಟುಕೊಂಡು ಮತ್ತೆ ಅಧಿಕಾರದ ಕನಸು ಕಾಣುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ನಾವು ರಾಮಮಂದಿರ ನಿರ್ಮಿಸಿದ್ದೇವೆ, ಆದರೆ ನೀವು ರಾಮಭಕ್ತರ ಮೇಲೆ ಗುಂಡು ಹಾರಿಸಿದ್ದೀರಿ. ಮೂರು ತಲೆಮಾರು ಕಳೆದರೂ ಜನ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಅಂಗದನ ಕಾಲಿಗೆ ಹೋಲಿಸಿದ ಅಮಿತ್ ಶಾ, ಈ ಸರ್ಕಾರವನ್ನು ಯಾರಿಂದಲೂ ಕದಲಿಸಲು ಸಾಧ್ಯವಿಲ್ಲ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧವೂ ವಾಗ್ದಾಳಿ ನಡೆಸಿದ ಶಾ, ಅವರ ಪಕ್ಷ ಮುಂದಿನ ಮೂರು ದಶಕಗಳ ಕಾಲ ಅಧಿಕಾರದಿಂದ ದೂರ ಉಳಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Related Articles

Back to top button