Karnataka News

*ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು ಪ್ರಕರಣ: ಧಾರವಾಡ ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಸಸ್ಪೆಂಡ್*

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಕ್ರಮ

ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಹುಲಿಗೆವ್ವ ಹೆಚ್ ಕುಕನೂರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುತ್ತಣ್ಣ ಸಿ.ಎ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಯೋಜನಾ ವ್ಯಾಪ್ತಿಯ ಹಳೇ ಹುಬ್ಬಳಿ ವಲಯದ ಸಮೀಪವಿರುವ ಗಬ್ಬೂರು ಕ್ರಾಸ್ ಬಳಿ ಇರುವ ಆಹಾರ ಗೋದಾಮಿನಲ್ಲಿ ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳಾದ ತೊಗರಿ ಬೇಳೆ, ಹೆಸರು ಕಾಳು, ಬೆಲ್ಲ, ಸಕ್ಕರೆ, ಗೋಧಿಹಿಟ್ಟನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಧಾರವಾಡ ಜಿಲ್ಲೆಯ ಉಪ ನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಂಗನವಾಡಿಗೆ ಸರಬರಾಜು ಮಾಡಿರುವಂತ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಆಹಾರ ಸಾಮಗ್ರಿಗಳು ಪತ್ತೆಯಾಗಿದ್ದವು. ಸದರಿ ಸಾಮಗ್ರಿಗಳ ಅಕ್ರಮ ದಾಸ್ತಾನಿಗೆ ಕಾರಣರಾದವರ ಮೇಲೆ ಕ್ರಮಕೈಗೊಳ್ಳುವಂತೆ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button