Politics

*ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ರಾಜ್ಯದ 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ*

​ 

ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಆಗದಂತೆ ಕ್ರಮ – ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದಲ್ಲದೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇ​ತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಹೇಳಿದ್ದಾರೆ.

ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ಅಂಗನವಾಡಿ ಉನ್ನತಿಕರಣದಿಂದ  ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟ​ದ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.

*ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಸ್ತು:*

ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ​ಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

*ಕಳಪೆ ಆಹಾರ ಪೂರೈಕೆಯಾದಲ್ಲಿ ಗಮನಕ್ಕೆ ತನ್ನಿ:*

ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಆಹಾರ ಸಾಮಾಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಕಂಡುಬಂದಲ್ಲಿ  ಗಮನಕ್ಕೆ ತರಬೇಕು. ಇಲ್ಲವಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.

*ಪ್ರತಿ ಮಹಿಳೆಯೂ ಮನೆಯ ಯಜಮಾನಿ:*.

ರಾಜ್ಯ ಸರ್ಕಾರವು ಸರ್ವಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು.

*ಯಜಮಾನಿಯರ ಖಾತೆಗೆ ಹಣ ಜಮೆ*

ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜ​ಮಾ ಆಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜ​ಮಾ ಆಗಲಿದೆ. ಪ್ರಸ್ತಕ ತಿಂಗಳಿನ ಹಣವು ​ಸ​ಹ ಇಷ್ಟರಲ್ಲೇ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದು ಸಚಿವರು ತಿಳಿಸಿದರು.

*ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ*

ಸಮಾಜದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪಾತ್ರ ಮಹತ್ವದ್ದಾಗಿದೆ. ಯಶೋಧೆಯು ಶ್ರೀಕೃಷ್ಣನನ್ನು ಹೇಗೆ ಬೆಳೆಸುತ್ತಾಳೆಯೋ, ಅದರಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ. ಒಂದು ಹೆಣ್ಣು ಮನೆ ಬೆಳಗುತ್ತಾಳೆ ಮತ್ತು ಸಮಾಜವನ್ನು ಬೆಳೆಸುತ್ತಾಳೆ. ಚುನಾವಣೆ, ಪಲ್ಸ್-ಪೊಲೀಯೋ, ಮನೆ ಸಮೀಕ್ಷೆ, ಮುಖ್ಯವಾಗಿ ಕೊರೊನಾ ಸಂದರ್ಭದಲ್ಲಿ ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಗಣನೀಯ ಸೇವೆ ನೀಡಿದ್ದಾರೆ. ಸಮಾಜದಲ್ಲಿ ಅತ್ಯಂತ ಪ್ರಮುಖ ಸೇವೆ ನೀಡುವ ಇಲಾಖೆ ನಮ್ಮದು ಎಂದರೆ ತಪ್ಪಾಗಲಾರದು ಎಂದು ಹೇಳಿದರು.

*ಬಳ್ಳಾರಿ ಡಿಸಿ ಬಗ್ಗೆ ಮೆಚ್ಚುಗೆ*
ರಾಜ್ಯದಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲಾಡಳಿತ​ದಿಂದ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆ​ಯ ಅಡಿಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ವಿತರಿಸಲಾಗುತ್ತಿದೆ. ಇದೊಂದು ಪ್ರಶಂಸನೀಯ ಕಾರ್ಯವಾಗಿದ್ದು, ಜಿಲ್ಲಾಧಿಕಾರಿಯವರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಸಚಿವರು, ಕಾರ್ಯಕ್ರಮದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ಹಾಗೂ ವಿಕಲಚೇತನರ ತ್ರಿಚಕ್ರ ವಾಹನಗಳು ಮತ್ತು ಪೋಷಣ್ ಆಭಿಯಾನ ಯೋಜನೆಯಡಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್‍ಫೋನ್, ಅಂಗನವಾಡಿ ಕೇಂದ್ರಗಳಿಗೆ ತೂಕದ ಯಂತ್ರ, ಆಶಾ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೀರೆ ವಿತರಿಸಿದರು.

ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೊರೋನಾದಲ್ಲಿ ಮೃತಹೊಂದಿದ ಪಾಲಕರ ಮಕ್ಕಳಿಗೆ ಲ್ಯಾಪ್‍ಟಾಪ್, ವಿಶೇಷಚೇತನ ಮಕ್ಕಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಬ್ರೈಲ್‍ಕಿಟ್, ಹೊಲಿಗೆ ಯಂತ್ರ ನೀಡಲಾಯಿತು.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆಗೈದ 08 ಮಕ್ಕಳನ್ನು ಇದೇ ವೇಳೆ ಸನ್ಮಾನಿಸಲಾಯಿತು. 

ಬೇಟಿ ಬಚಾವೋ​ -ಬೇಟಿ ಪಡಾವೋ ಯೋಜನೆಯಡಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದನಾ ಪತ್ರ ಮತ್ತು ಚೆಕ್ ವಿತರಿಸಲಾಯಿತು.

ಬಳ್ಳಾರಿ ನಗರ ಶಾಸಕ ನಾ.ರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನರಾಂ ಚರ್ಮ ​ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಚ್. ನಿಶ್ಚಲ್, ಬಳ್ಳಾರಿ ಜಿಲ್ಲಾ  ಉಪನಿರ್ದೇಶಕ ವಿಜಯ್‍ಕುಮಾರ್ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button