Uncategorized

*ಕಳಪೆ ಮೊಟ್ಟೆ ವಿತರಿಸಿದವರನ್ನು ಕಪ್ಪುಪಟ್ಟಿಗೆ ಸೇರಿಸಿ; ಅಧಿಕಾರಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಮೊಟ್ಟೆ ಪೂರೈಕೆ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡುತ್ತಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು , ಸಪ್ಲೈ ಲಿಸ್ಟ್ ನಿಂದಲೂ ಕೈ ಬಿಡುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ಖರೀದಿ ವಿಕೇಂದ್ರೀಕರಣ ಮಾಡಿದ ಕಾರಣದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿ ಆಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೆ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು. ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ. ಕಳಪೆ ಮೊಟ್ಟೆ ವಿತರಣೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದರು.

ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕ ಪೂರೈಕೆ ಆಗ್ತಿಲ್ಲ. ಈ ನಿಟ್ಟಿನಲ್ಲಿ ಖರೀದಿ ವ್ಯವಸ್ಥೆ ಕೇಂದ್ರೀಕರಣ ಮಾಡಲು ಕ್ರಮವಹಿಸಲಾಗುವುದು ಎಂದರು. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ತಿಳಿಸಿದರು. ಸರ್ಕಾರದ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ನಡೆಯುತ್ತಿದ್ದು, ಎಲ್ಲಾ ಪ್ರಸ್ತಾಪಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button