

ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.
ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು.

ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ