ಅಣ್ಣಾಸಾಹೇಬ ಜೊಲ್ಲೆ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ -ಪೂಜಾರ್
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಕಲ್ಪ ಇಟ್ಟುಕೊಂಡು ತಿರುಕನ ಕನಸು ಕಾಣುತ್ತಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ೨ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪ್ರಭಾರಿ ಮತ್ತು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಳೆದ ಒಂದು ತಿಂಗಳಿಂದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಸಂಚಾರ ಮಾಡಿದಾಗ ಬಿಜೆಪಿಗೆ ಒಳ್ಳೆಯ ಬೆಂಬಲ ವ್ಯಕ್ತವಾಗುತ್ತದೆ. ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಅವರ ಸೌಮ್ಯ ಸ್ವಭಾವಕ್ಕೆ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತದೆ ಎಂದರು.
ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಸಂಸ್ಥೆಯ ಮೂಲಕ ಹಮ್ಮಿಕೊಂಡಿರುವ ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಗಳಿಂದ ಇಡೀ ಕ್ಷೇತ್ರದಲ್ಲಿ ತನ್ನದೆಯಾದ ಛಾಪು ಮೂಡಿಸಿದ್ದಾರೆ. ಹೀಗಾಗಿ ಅವರು ಹೆಚ್ಚಿನ ಮತಗಳಿಂದ ಗೆಲ್ಲುತ್ತಾರೆ ಎಂದರು.
ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ, ಹುಕ್ಕೇರಿಯಲ್ಲಿ ಕೇಂದ್ರ ಸಚಿವ ಅಮಿತ ಶಾ ಹೀಗೆ ರಾಜ್ಯದ ವಿವಿಧ ರಾಜ್ಯ ನಾಯಕರು ಕ್ಷೇತ್ರದಲ್ಲಿ ಪ್ರಚಾರ ಮಾಡಿರುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಬಂದಿದೆ. ಈಗಾಗಲೇ ಮತದಾರರು ಕೂಡಾ ಬಿಜೆಪಿಗೆ ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದಾರೆ. ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಬೀಳುವ ಮತಗಳು ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಿದ್ದಂತಾಗುತ್ತದೆ. ಲೋಕಸಭೆ ಕ್ಷೇತ್ರದ ಕಾರ್ಯಕರ್ತರು ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ದುಂಡಪ್ಪ ಬೆಂಡವಾಡೆ, ಅಭಯ ಮಾನ್ವಿ, ರಾಜು ಹರಗನ್ನವರ, ಅಪ್ಪಾಸಾಹೇಬ ಚೌಗಲೆ, ಸಂಜಯ ಪಾಟೀಲ, ಪ್ರಮೋದ ಮಹಾಜನ ಸೇರಿದಂತೆ ಮುಂತಾದವರು ಇದ್ದರು.
ಸೋಲಿನ ಭೀತಿ-
ಕಾಂಗ್ರೆಸ್ ಸೋಲಿನ ಭೀತಿಯಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರಕ್ಕೆ ಇಳಿದಿದ್ದಾರೆ. ಅದನ್ನು ಯಾರು ನಂಬಬಾರದೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ ಹೇಳಿದರು.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಯಬಾಗ ವಿಧಾನಸಭೆ ಕ್ಷೇತ್ರದ ನಾಲ್ಕೈದು ಗ್ರಾಮಗಳಲ್ಲಿ ಹೊರ ರಾಜ್ಯದ ನಾಲ್ಕೈದು ಯುವಕರು ಅಂಚೆ ಪೋಷ್ಠ ಕಾರ್ಡ ಮೂಲಕ ಪ್ರಿಯಂಕಾ ಜಾರಕಿಹೊಳಿ ೩ ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪರಾಭವಗೊಂಡಿದ್ದಾರೆಂದು ಸುಳ್ಳಿನ ಅಂಚೆ ಕಾರ್ಡ ವಿತರಣೆ ಮಾಡುತ್ತಿದ್ದಾರೆ. ಕೂಡಲೇ ಬಿಜೆಪಿ ಕಾರ್ಯಕರ್ತರು ಯುವಕರನ್ನು ಹಿಡಿದು ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಈ ಕುರಿತು ಚುನಾವಣೆ ಆಯೋಗಕ್ಕೂ ದೂರು ನೀಡಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ