ಪೂರ್ತಿ ಅಧ್ಯಯನದ ನಂತರ ಬರಪೀಡಿತ ತಾಲೂಕುಗಳ ಘೋಷಣೆ: ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಮೈಸೂರು: ಸಂಪೂರ್ಣ ಅಧ್ಯಯನದ ನಂತರ ವರದಿ ಪರಿಗಣಿಸಿ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ 61 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಇನ್ನೂ 136 ತಾಲೂಕುಗಳ ಬರ ಅಧ್ಯಯನ ಮುಂದುವರಿದಿದ್ದು, ಅದು ಪೂರ್ಣಗೊಂಡ ನಂತರ ಅಧ್ಯಯನದ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
‘ಒಂದು ದೇಶ ಒಂದು ಚುನಾವಣೆ’ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದು ಅಸಾಧ್ಯದ ಹಾಗೂ ಅವೈಜ್ಞಾನಿಕ ವಿಚಾರ. ಕೆಲ ರಾಜ್ಯಗಳಲ್ಲಿ ರಾಜ್ಯಪಾಲರ ಆಡಳಿತ ಇರುತ್ತದೆ. ಕೆಲವು ಕಡೆಯ ಸರಕಾರಗಳು ಅರ್ಧ ಅವಧಿ ಮುಗಿಸಿರುತ್ತವೆ. ಇದು ಆಗಹೋಗದ ವಿಷಯ. ಕರ್ನಾಟಕದ ಚುನಾವಣೆ ಫಲಿತಾಂಶದಿಂದ ಬಿಜೆಪಿಯವರು ಧೃತಿಗೆಟ್ಟಿದ್ದಾರೆ. ಪ್ರಧಾನಿ ಮೋದಿ ಅವರು ಪ್ರಚಾರ ಮಾಡಿದ ಕಡೆಗಳಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ. ಇದನ್ನು ಮರೆಮಾಚಿಕೊಳ್ಳಲು ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಕಟಕಿದರು.
ಎಲ್.ಕೆ. ಆಡ್ವಾಣಿ ಅವರ ಭೇಟಿ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ತಳ್ಳಿಹಾಕಿದ ಅವರು, “ಕೋಮುವಾದಿಗಳೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗದು. ಈ ಹಿಂದೆ ಮೋದಿ, ಅಮಿತ್ ಶಾ ಅವರನ್ನೂ ಭೇಟಿ ಮಾಡಿದ್ದೇನೆ. ಅದಕ್ಕೆಲ್ಲ ಅರ್ಥ ಕಲ್ಪಿಸುವುದು ಸರಿಯಲ್ಲ” ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ