
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಮಾಫಿ ಸಾಕ್ಷಿಯಾಗಿರುವ 14ನೇ ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವುದನ್ನು ಮುಂದೂಡುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಹೈಕೋರ್ಟ್ ಆದೇಶದ ಪ್ರತಿ ತಡವಾಗಿ ಸಿಕ್ಕಿದ್ದು, ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಸಮಯ ಬೇಕಿದೆ ಎಂದು ವಾದಿಸಿದ್ದರು.
ಪ್ರದೋಷ್ ಅವರ ಹೇಳಿಕೆಯನ್ನು ಸದ್ಯಕ್ಕೆ ದಾಖಲಿಸದೆ, ಉಳಿದ ಸಾಕ್ಷಿಗಳ ಹೇಳಿಕೆ ಮುಂದುವರಿಸಲು ಅವಕಾಶ ನೀಡಬೇಕು ಎಂದು ದರ್ಶನ್ ಪರ ವಕೀಲ ಹಷ್ಮತ್ ಪಾಷ ಕೋರಿದರು. ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ಕನಿಷ್ಠ 10 ದಿನಗಳ ಕಾಲಾವಕಾಶ ಬೇಕಿದೆ ಎಂದು ವಾದಿಸಿದರು.
ಹೈಕೋರ್ಟ್ ಸೂಚಿಸಿರುವ ಏಳು ಸಾಕ್ಷಿಗಳ ಪೈಕಿ ಪ್ರದೋಷ್ ಕೂಡ ಒಬ್ಬರಾಗಿದ್ದಾರೆ. ಉಳಿದ ಸಾಕ್ಷಿಗಳ ಹೇಳಿಕೆ ದಾಖಲಿಸಬಹುದು. ಆದರೆ ಪ್ರದೋಷ್ ಅವರ ಹೇಳಿಕೆಯನ್ನು ಏಳನೇ ಸಾಕ್ಷಿಯಾಗಿ ದಾಖಲಿಸಬೇಕು ಎಂದು ದರ್ಶನ್ ಪರ ವಕೀಲರು ಮನವಿ ಮಾಡಿದರು.
ಇದಕ್ಕೆ ಸರ್ಕಾರಿ ಪರ ವಕೀಲ ಸಚಿನ್ ಆಕ್ಷೇಪ ವ್ಯಕ್ತಪಡಿಸಿದರು. ಪ್ರದೋಷ್ ಅವರಿಗೆ ಸೆ.24ರಂದೇ ಸಮನ್ಸ್ ನೀಡಲಾಗಿದೆ. ಹೈಕೋರ್ಟ್ನಲ್ಲಿ ವಿಚಾರಣೆ ನಡೆದ ಬಳಿಕವೇ ಸಮನ್ಸ್ ಜಾರಿಯಾಗಿದೆ. ಹೀಗಾಗಿ ಅರ್ಜಿ ಮುಂದೂಡಲು ಹೊಸ ಕಾರಣಗಳಿಲ್ಲ ಎಂದು ವಾದಿಸಿದರು.
ಪ್ರದೋಷ್ ಪರ ವಕೀಲ ಸಂತೋಷ್ ಕೂಡ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿದರು. ಸೋಮವಾರವೇ ಮಾಫಿ ಸಾಕ್ಷಿಯ ಹೇಳಿಕೆ ದಾಖಲಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ವಾದ-ಪ್ರತಿವಾದ ಆಲಿಸಿದ 59ನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶರು, ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ದಿನಾಂಕ ಮುಂದೂಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದರು.
ಹೀಗಾಗಿ ಸೋಮವಾರ 14ನೇ ಆರೋಪಿ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ.
ಇದೇ ವೇಳೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ವಿಚಾರಣೆಯಲ್ಲಿ ಮುಂದಿನ ಹಂತವಾಗಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಇದೀಗ ಗಮನ ಸೆಳೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




