
ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಅಕ್ರಮ ಖಂಡಿಸಿ ಹಾಗೂ ಮುಖ್ಯಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಗುರುದ್ವಾರ ಆವರಣಕ್ಕೆ ನುಗ್ಗಿದ ಪರಿಣಾಮ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐತಿಹಾಸಿಕ ಬಾಂಗ್ಲಾ ಸಾಹಿಬ್ ಗುರುದ್ವಾರದ ಆವರಣದಲ್ಲಿ ಪ್ರತಿಭಟನೆ ನಡೆಸಿ ಗದ್ದಲ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹಾಗೂ ಪಕ್ಷದ ಇತರ ಪ್ರಮುಖ ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಡಿಎಸ್‌ಜಿಎಂಸಿ ಪೊಲೀಸರಿಗೆ ದೂರು ಸಲ್ಲಿಸಿ ಆಪ್ ವಿರುದ್ಧ ಆರೋಪ ಮಾಡಿದ್ದರು. ಅ. 10 ರಂದು ಆಪ್ ಕಾರ್ಯಕರ್ತರು ಮತ್ತು ಬೆಂಬಲಿಗರು ಗುರುದ್ವಾರ ಆವರಣವನ್ನು ಪ್ರವೇಶಿಸಿ ಪ್ರತಿಭಟನೆ ನಡೆಸುವ ಮೂಲಕ ಶಾಂತಿ ಭಂಗ ಉಂಟುಮಾಡಿದ್ದಾರೆ. ಧಾರ್ಮಿಕ ಪಾವಿತ್ರ್ಯತೆ ಹೊಂದಿರುವ ‘ಗುರು ಘರ್’ ಅನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸಮಿತಿ ಆಕ್ಷೇಪಿಸಿದೆ.
ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಮಾತ್ರವಲ್ಲದೆ ಹಲವು ಆಪ್ ಶಾಸಕರು ಹಾಗೂ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ತಿರುಚಿದ ವಿಡಿಯೋಗಳನ್ನು ಹಂಚಿಕೊಂಡು ಗುರುದ್ವಾರ ಸಮಿತಿಯ ಮೇಲೆಯೇ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಸ್ತುತ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ದೂರುದಾರರು ಸಲ್ಲಿಸಿರುವ ಸಿಸಿಟಿವಿ ದೃಶ್ಯಾವಳಿ ಹಾಗೂ ವಿಡಿಯೋ ದಾಖಲೆಗಳನ್ನು ಪರಿಶೀಲಿಸಿ ಘಟನಾವಳಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




