ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೂ ಸುಧಾರಣ ಕಾಯಿದೆ, ಎಪಿಎಂಸಿ ಕಾಯಿದೆ ತಿದ್ದುಪಡಿ ವಿರೋಧಿಸಿ ಒಂದೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದರೆ ಇನ್ನೊಂದೆಡೆ ಕೊರೊನಾ ಸಂಕಷ್ಟದ ನಡುವೆಯೂ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬಿದಿಗಿಳಿದಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಳೆದ ಮೂರು ದಿನಗಳಿಂದ ಸರ್ಕಾರದ ವಿರುದ್ಧ ಅನ್ನದಾತರು, ಕಾರ್ಮಿಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಮಧ್ಯೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊರೊನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಾದಿ ತುಳಿದಿದ್ದಾರೆ.
ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿರುವಆಶಾಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ, ಈ ಹಿಂದೆ ನಾವು ನಡೆಸಿದ್ದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವುದಾಗಿ ಹೇಳಿ ಭರವಸೆ ನೀಡಿ ಮನೆಗೆ ಕಳುಹಿಸಿತ್ತು. ಆದರೆ ಈ ವರೆಗೂ ಯಾವುದೇ ಬೇಡಿಕೆ ಈಡೇರಿಸಿಲ್ಲ. ಸರ್ಕಾರ ಕೊಟ್ಟ ಮಾತಿಗೆ ತಪ್ಪಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರು.
40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೊರೊನಾದಂತಹ ಈ ಕಠಿಣ ಪರಿಸ್ಥಿತಿಯಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದೇವೆ. ಆದಾಗ್ಯೂ ಸರ್ಕಾರ ತಮ್ಮ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ. ಮಾಸಿಕ ಗೌರವಧನವನ್ನು 12 ಸಾವಿರಕ್ಕೆ ಹೆಚ್ಚಿಸುತ್ತೇವೆ ಎಂದು ಹೇಳಿದ್ದ ರಾಜ್ಯ ಸರ್ಕಾರ ಮಾತಿಗೆ ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ