Karnataka NewsLatestPolitics

*ಧರಣಿ ನಿರತ ಆಶಾ ಕಾರ್ಯಕರ್ತೆಯರಿಗೆ ಭಾವನಾತ್ಮಕ ಮನವಿ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. ಹಗಲು-ರಾತ್ರಿ ಮೈಕೊರೆವ ಚಳಿಯಲ್ಲಿ ಪುಟ್ಟ ಮಕ್ಕಳೊಂದಿಗೆ ನೆಲದಲ್ಲಿಯೇ ಮಲಗಿ ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ ಡಿ.ಕೆ.ಶಿವಕುಮಾರ್ ಆಶಾ ಕಾರ್ಯಕರ್ತೆಯರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ. ಹೋರಾಟ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸಿಎಂ ಡಿ,ಕೆ.ಶಿವಕುಮಾರ್, ಆಶಾ ಸಹೋದರಿಯರಲ್ಲಿ ಸರ್ಕಾರದ ಪರವಾಗಿ ನನ್ನ ಕಳಕಳಿಯ ಮನವಿ…

ನಿಮ್ಮ ಬೇಡಿಕೆಗಳಿಗಾಗಿ ನೀವು ನಡೆಸುತ್ತಿರುವ ಹೋರಾಟದ ನೋವು ಮತ್ತು ಸಂಕಷ್ಟ ನನಗೆ ಅರ್ಥವಾಗುತ್ತದೆ. ನಿಮ್ಮ ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಹೋರಾಟ ಮಾಡುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ನೀವು ನನಗೆ ಕೇವಲ ಆಶಾ ಕಾರ್ಯಕರ್ತೆಯರಲ್ಲ, ನನ್ನ ಸಹೋದರಿಯರಿದ್ದಂತೆ.

ಅಂಗನವಾಡಿಗಳ ಸ್ಥಾಪನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭ ಹಾಗೂ ಆಶಾ ಕಾರ್ಯಕರ್ತೆಯರ ಹುದ್ದೆಗಳ ಸೃಷ್ಟಿಯ ಮೂಲಕ ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದ ಕಾರ್ಯಕರ್ತೆಯರಿಗೆ ಸೇವೆಯ ಅವಕಾಶ ಕಲ್ಪಿಸಿದ್ದು ನಮ್ಮ ಕಾಂಗ್ರೆಸ್‌ ಸರ್ಕಾರ.

ನಿಮ್ಮ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸಮಗ್ರ ಮತ್ತು ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಸಂಪುಟದ ಜೊತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ನಿಮ್ಮೊಂದಿಗೆ ನಾವಿದ್ದೇವೆ. ಒಬ್ಬ ಅಣ್ಣನಾಗಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ, ಹೋರಾಟವನ್ನು ಕೈಬಿಡಿ. ನಿಮ್ಮ ಸೇವೆ, ಶ್ರಮ ಮತ್ತು ತ್ಯಾಗವನ್ನು ನಾವು ಗೌರವಿಸುತ್ತೇವೆ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.


Related Articles

Back to top button