ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಸಿಕ 12 ಸಾವಿರ ರೂಪಾಯಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಾಗೂ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಕಾರ್ಯಕ್ರಮ ಹಾಕಿಕೊಂಡಿರುವ ಆಶಾ ಕಾರ್ಯಕರರತೆಯರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸರ್ಕಾರ ತಕ್ಷಣವೇ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಆರಂಭದ ಸಮಯದಲ್ಲಿ ನನ್ನ ಬಳಿ ಬಂದು ತಮ್ಮ ಸಮಸ್ಯೆ ಹೇಳಿಕೊಂಡಿದ್ದರು. ನಾನು ಕೂಡ ನೆಲಮಂಗಲದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಅವರ ಅಹವಾಲು ಆಲಿಸಿದೆ. ನಂತರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಕೂಡಲೇ ಅವರ ಬೇಡಿಕೆ ಈಡೇರಿಸಿ ಎಂದು ಆಗ್ರಹಿಸಿದ್ದೆ. ಆದರೂ ಸರ್ಕಾರ ಇವರ ಬಗ್ಗೆ ಅಸಡ್ಡೆ ತೋರಿರುವುದು ಅಕ್ಷಮ್ಯ ಎಂದರು.
ಆಶಾ ಕಾರ್ಯಕರ್ತೆಯರ ಬೇಡಿಕೆ ನ್ಯಾಯಯುತವಾಗಿದೆ. ಅವರಿಗೆ ಸುರಕ್ಷಾ ಸಾಧನಗಳನ್ನು ಒದಗಿಸಬೇಕು. ಕೊರೋನಾ ತುರ್ತು ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆ ತಿರುಗಿ ಎರಡೇರಡು ಬಾರಿ ಸಮೀಕ್ಷೆ ನಡೆಸಿದ್ದಾರೆ. ಅವರು ತಮ್ಮ ಪ್ರಾಮಾಣಿಕ ಕೆಲಸಕ್ಕೆ ತಕ್ಕ ಬೇಡಿಕೆಗಳನ್ನು ಕೇಳುತ್ತಿದ್ದು ಸರ್ಕಾರ ಈ ರೀತಿ ವರ್ತಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.
ಸರ್ಕಾರ ಆಶಾ ಕಾರ್ಯಕರ್ತರಿಗೆ 3 ಸಾವಿರ ಪ್ರೋತ್ಸಾಹ ಧನ ನೀಡುವುದಾಗಿ ಘೋಷಣೆ ಮಾಡಿತ್ತು. ಘೋಷಣೆ ಮಾಡಿ ಮೂರು ತಿಂಗಳಾದರೂ ಶೇ.10ರಷ್ಟು ಜನರಿಗೆ ಹಣ ತಲುಪಿಲ್ಲ. ಅವರ ತಾಳ್ಮೆಯನ್ನು ಸರ್ಕಾರ ಪರೀಕ್ಷೆ ಮಾಡಲು ಹೊರಟಿದೆ.
ಆಶಾ ಕಾರ್ಯಕರ್ತೆಯರು ಜೀವ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದು, ಅವರಿಗೆ ವಿಮೆ ಸೌಲಭ್ಯ ನೀಡಬೇಕು. ಅವರು ಕೇಳುತ್ತಿರುವ ಮಾಸಿಕ 12 ಸಾವಿರ ರೂಪಾಯಿ ವೇತನ ನೀಡಬೇಕು, ಈಗ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುತ್ತಿರುವ ಗೌರವ ಧನವನ್ನು ಏಕ ಕಾಲಕ್ಕೆ ನೀಡಬೇಕು. ಹಲವು ತಿಂಗಳುಗಳಿಂದ ಇರುವ ಬಾಕಿ ಹಣ ಕೂಡಲೇ ನೀಡಬೇಕು ಎಂದು ಆಗ್ರಹಿಸಿದರು.
ಕಳೆದ 19 ದಿನಗಳಿಂದ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಮುಖ್ಯಮಂತ್ರಿಗಳಾಗಲಿ, ಸಂಪುಟ ಸಚಿವರುಗಳಾಗಲಿ ಅವರ ಸಮಸ್ಯೆ ಏನು ಎಂದು ಕೇಳುವ ಪ್ರಯತ್ನ ಮಾಡಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷ ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ