*ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ; ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯ; ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಅಶ್ವತ್ಥನಾರಾಯಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಡ್ಯದಲ್ಲಿ ಟಿಪ್ಪು -ಸಿದ್ದರಾಮಯ್ಯ ಅವರನ್ನು ಹೋಲಿಸಿ ಆಡಿರುವ ಮಾತುಗಳು ಸಾಂದರ್ಭಿಕ ಪ್ರಸ್ತಾಪವೇ ವಿನಃ ಯಾವುದೇ ದುರುದ್ದೇಶದ ಮಾತುಗಳಲ್ಲ. ಇದು ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ ಎಂದು ಸಚಿವ ಅಶ್ವತ್ಥನಾರಾಯಣ ಸಿದ್ದರಾಮಯ್ಯ ವಿರುದ್ಧದ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ ಎಂಬ ನನ್ನ ಹೇಳಿಕೆ ವೈಯಕ್ತಿಕವಾಗಿ ಹೇಳಿದ್ದಲ್ಲ, ನನ್ನ ಮಾತಿನ ಹಿಂದೆ ಯಾವುದೇ ದುರುದ್ದೇಶವಿಲ್ಲ. ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗವಾಗಿದೆ. ನಾನು ಆಡಿರುವ ಮಾತುಗಳನ್ನು ಆ ಚೌಕಟ್ಟಿನಲ್ಲೇ ನೋಡಬೇಕು. ಇದು ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ.
ನನ್ನ ಹೇಳಿಕೆಯನ್ನು ಅವರು ವೈಯಕ್ತಿಕವಾಗಿ ತಿರುಚಿಕೊಳ್ಳುತ್ತಿದ್ದಾರೆ. ತಮಗೆ ಬೇಕಾದ ಹಾಗೆ ಹೇಳಿಕೊಳ್ಲುತ್ತಿದ್ದಾರೆ. ನಾನು ಸಹಜವಾಗಿ ಚುನಾವಣೆಯಲ್ಲಿ ಅವರನ್ನು ಸೋಲಿಸಿ ಎಂಬ ರೀತಿಯಲ್ಲಿ ಹೇಳಿದ್ದಷ್ಟೇ. ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿಯೇ ಮಾತನಾಡಿದ್ದೇನೆ. ನನ್ನ ಮಾತಿಂದ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಹೇಳಿದರು.
ಸಾಂದರ್ಭಿಕವಾಗಿ ಆಡು ಭಾಷೆಯಲ್ಲಿ ಸೋಲಿಸಿ ಎಂಬ ಅರ್ಥದಲ್ಲಿ ಹೇಳಿರುವ ಮಾತನ್ನು ತಮಗೆ ಬೇಕಾದ ಹಾಗೆ ಅರ್ಥೈಸಿಕೊಂಡು, ಮಾತನಾಡುತ್ತಿರುವ ಸಿದ್ದರಾಮಯ್ಯ ಅವರ ಭಾಷಾ ಪ್ರಾವೀಣ್ಯತೆ, ಅವರು ಬಳಸುವ ಗ್ರಾಮೀಣ ಪದಗಳು ಏನೆಂಬುದನ್ನು ರಾಜ್ಯದ ಜನತೆಯೇ ನೋಡಿದೆ. ಟಿಪ್ಪುವಿನಲ್ಲಿರುವ ಕಟುಕತನದ ಮನಸ್ಥಿತಿ ನಮ್ಮ ಮಂಡ್ಯದ ಜನತೆಗೆ ಇಲ್ಲ ಎಂದು ಹೇಳಿದ್ದಾರೆ.
ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು ಸಿದ್ದರಾಮಯ್ಯ ಅವರ ಸಂಸ್ಕೃತಿ ಆಗಿರಬಹುದು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ ಎಂದು ತಿಳಿಸಿದ್ದಾರೆ.
https://pragati.taskdun.com/ashwaththanarayanasiddaramaiahtippuvidhanasabha-election/




