Kannada NewsLatestNational

*ಟ್ರಕ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ*: *23 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಿನಿ ಬಸ್​​ ಮತ್ತು ಟ್ರಕ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 23 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಸ್ಸಾಂನ ಕಾಜಿರಂಗ ಸಮೀಪದ ರೊಂಗಾಜನ್‌ನಲ್ಲಿ ಈ ಅಪಘಾತ ಸಂಭವಿಸಿದ್ದು, ಬೊಕಾಖಾಟ್‌ನಿಂದ ನಗಾಂವ್‌ಗೆ ತೆರಳುತ್ತಿದ್ದ ಮಿನಿ ಬಸ್‌- ಟ್ರಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮಿನಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಹಲವರು ವಾಹನದ ಅವಶೇಷಗಳ ನಡುವೆ ಸಿಲುಕಿದ ಕಾರಣ ಸಾವುನೋವುಗಳ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೊಹೊರಾ ಮಾದರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಬಂಧಗಳನ್ನು ಉಲ್ಲಂಘಿಸಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಮಿನಿ ಬಸ್​​ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಂಟೇನರ್ ಟ್ರಕ್‌ಗೆ ಡಿಕ್ಕಿ ಹೊಡೆದಿರಬಹುದೆಂದು ಅಂದಾಜಿಸಲಾಗಿದೆ.

ಅಪಘಾತದ ಬಗ್ಗೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಸಂತಾಪ ಸೂಚಿಸಿದ್ದಾರೆ. ಇಂದು ಕಾಜಿರಂಗದಲ್ಲಿ ಸಂಭವಿಸಿದ ದುರಂತ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ಈ ಘಟನೆಯಿಂದ ಉಂಟಾಗಿರುವ ಸಾವು-ನೋವಿನ ಪ್ರಮಾಣ ನಮ್ಮೆಲ್ಲರನ್ನೂ ಆಘಾತಕ್ಕೀಡು ಮಾಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಂದು ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ನೋವನ್ನು ಯಾವುದೇ ಮಾತುಗಳಿಂದ ಕಡಿಮೆ ಮಾಡಲು ಸಾಧ್ಯವಿಲ್ಲ. ಆದರೆ ಈ ಸಂಕಷ್ಟದ ಸಮಯದಲ್ಲಿ ಅವರು ಒಂಟಿಯಲ್ಲ ಎಂಬುದನ್ನು ತಿಳಿಸಲು ಬಯಸುತ್ತೇನೆ. ದುಃಖದ ಈ ಸಂದರ್ಭದಲ್ಲಿ ಇಡೀ ಅಸ್ಸಾಂ ಅವರ ಕುಟುಂಬಗಳ ಬೆಂಬಲಕ್ಕೆ ನಿಂತಿದೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button