Kannada NewsKarnataka NewsLatest

ಕರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಪಾಲಿಸಲು ಕರೊನಾ ಸೈನಿಕರಿಂದ ಜಾಗೃತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಜಿಲ್ಲೆಯಲ್ಲಿ ಕೊರೊನಾ ಸೈನಿಕರಿಂದ ಮನೆ ಮನೆಗೆ ತೆರಳಿ ಕೋವಿಡ್-19 ವೈರಸ್ ಬಗ್ಗೆ ಜಾಗೃತಿ ಮೂಡಿಸಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಉಪಯೋಗಿಸುವ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕಾರ್ಮಿಕ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ಬಗ್ಗೆ  ಮಂಡೊಳಿ, ಹಂಗರಗಾ, ಸಾವಗಾಂವ ಹಾಗೂ ಬೆನಕನ ಹಳ್ಳಿ ಗ್ರಾಮಗಳಲ್ಲಿ ಕರೊನಾ ಸೈನಿಕರು ಜಾಗೃತಿ ಕಾರ್ಯಕ್ರಮ ನಡೆಸಿದರು.
ಈ ವೇಳೆ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಕಾರ್ಯದರ್ಶಿ ಡಾ.ಡಿ. ಎನ್.ಮಿಸಾಳೆ, ಅವರು ನೀರಿನಿಂದ ಹಾಗೂ ಸೋಪಿನಿಂದ ವೈಜ್ಞಾನಿಕವಾಗಿ ಕೈಗಳನ್ನು ತೊಳೆಯುವ ಬಗ್ಗೆ ಹಾಗೂ ಸ್ಯಾನಿಟೈಸರ್ ಯೋಪಯೊಗಿಸುವ ಕುರಿತು ಪ್ರಾಯೋಗಿಕವಾಗಿ ವಿವರಿಸಿದರು.
ಕೊರೊನಾ ಸೈನಿಕರು ಹಾಗೂ ಆಶಾ ಕಾರ್ಯಕರ್ತೆಯರು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
ಬಾಯಿ ಮತ್ತು ಮೂಗನ್ನು ಮುಚ್ಚಲು ಮಾಸ್ಕ್ ಅಥವಾ ಕರವಸ್ತ್ರಗಳನ್ನು ಸ್ವಚ್ಚತೆ ಹಾಗೂ ಉಪಯೋಗಿಸುವ ಬಗ್ಗೆ ವಿವರಿಸಿದ ಅವರು ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ ಅಂತರದ ಕಾಯ್ದುಕೊಳ್ಳುವದರ ಮಹತ್ವವನ್ನು ಜನರಿಗೆ ಮನೆ ಮನೆಗೆ ತೆರಳಿ ತಿಳಿಸಿದರು.
ಕಾರ್ಮಿಕ ಇಲಾಖೆಯ ಉಪಾಯುಕ್ತ ವೆಂಕಟೇಶ ಸಿಂದಿಕಟ್ಟಿ, ರೆಡ್ ಕ್ರಾಸ್ ಸಂಸ್ಥೆಯ ಚೇರ್ಮನ್ ಅಶೋಕ ಬದಾಮಿ, ಕಾರ್ಮಿಕ ಇಲಾಖೆಯ ಅಧಿಕಾರಿ ಮಹಾಂತೇಶ ಜೋಗುರ, ಲೇಬರ್ ಇನ್ಸ್ಪೆಕ್ಟರ್ ರಮೇಶ್ ಕೆಸರೂರ,ಆರೋಗ್ಯ ಇಲಾಖೆಯ ಅಧಿಕಾರಿ ಎಲಿಗಾರ‌‌ ಉಪಸ್ಥಿತರಿದ್ದರು.  ಕೊರೊನಾ ಸೈನಿಕರಾದ ಡಾ.ಶಿವಾನಂದ ಡುಮ್ಮಗೋಳ ಹಾಗೂ ಬಸವರಾಜ್ ಕೊಳಚೆ ಇವರು ಮನೆ ಮನೆಗೆ ತೆರಳಿ‌‌ ಸ್ಯಾನಿಟೈಸರ್ ವಿತರಿಸಿದರು.

 ಸೋಂಕು ಹರಡುವಿಕೆ ತಡೆಯಲು ಸೂಚನೆ

 ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿ ಸದ್ಯಕ್ಕೆ ಕ್ವಾರಂಟೈನ್ ನಲ್ಲಿ ಇರುವ ಯಾವುದೇ ವ್ಯಕ್ತಿಯನ್ನು ಎಂತಹದೇ ಸಂದರ್ಭದಲ್ಲೂ ಯಾವುದೇ ಕಾರಣಕ್ಕೂ ಇನ್ನೊಬ್ಬರ ಜತೆ ಬೆರೆಯದಂತೆ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳ ಜತೆ ಶುಕ್ರವಾರ(ಏ.೧೦) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸೋಂಕಿತ ವ್ಯಕ್ತಿಯೊಬ್ಬರ ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವ ಒಂದೇ ಕುಟುಂಬದ ಮೂವರು ಸದಸ್ಯರಲ್ಲೂ ಸೋಂಕು ಕಂಡುಬಂದಿರುವುದರಿಂದ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದಂತೆ ತಿಳಿಸಿದರು.
ಈಗಾಗಲೇ ಬಿಡುಗಡೆಯಾಗಿರುವ ಪಡಿತರ ಆಹಾರಧಾನ್ಯವನ್ನು ನಾಳೆ ಸಂಜೆಯೊಳಗೆ ಸಂಪೂರ್ಣವಾಗಿ ವಿತರಿಸಬೇಕು.
ಇದಲ್ಲದೇ ತಾಲ್ಲೂಕು ಮತ್ತಿತರ ಕೇಂದ್ರಗಳಲ್ಲಿ ಜನಸಂದಣಿ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಇನ್ನಷ್ಟು ತಿಳಿವಳಿಕೆ ಮೂಡಿಸಬೇಕು ಎಂದರು.
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದರ ಜತೆಗೆ ಫಾಗಿಂಗ್, ಪೌಡರ್ ಸಿಂಪಡಣೆ ಕಡ್ಡಾಯವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಸೂಚನೆ ನೀಡಿದರು.

ಕಂಟೈನ್ಮೆಂಟ್ ಝೋನ್- ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ:

ಆರೋಗ್ಯ ಇಲಾಖೆಯ ಅಧಿಕಾರಿಗಳು ಈಗಾಗಲೇ ಘೋಷಿಸಲಾಗಿರುವ ಕಂಟೈನ್ಮೆಂಟ್ ಝೋನ್ ಗಳಲ್ಲಿರುವ  ಎಷ್ಟು ಮನೆಗಳು‌ ಇವೆ ಎಂಬುದನ್ನು ಪರಿಶೀಲಿಸಿಕೊಂಡು ಅವುಗಳ ಸಂಖ್ಯೆಗೆ ಅನುಗುಣವಾಗಿ ತಂಡಗಳನ್ನು ರಚಿಸಿಕೊಂಡು ಪ್ರತಿ ಮನೆ‌ ಮನೆಗಳಿಗೆ ಭೇಟಿ ಸೋಂಕು ಲಕ್ಷಣಗಳ ಬಗ್ಗೆ ನಿರಂತರ ಪರಿಶೀಲಿಸಿ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ನಿರ್ದೇಶನ ನೀಡಿದರು.
ಆರೋಗ್ಯ ಮತ್ತಿತರ ಇಲಾಖೆಯ ಸದಸ್ಯರನ್ನು ಒಳಗೊಂಡ ತಂಡವು ಪ್ರತಿ ಮನೆಯಲ್ಲಿ ಇರುವವರ ಸಮಗ್ರ ಮಾಹಿತಿಯನ್ನು ಕಲೆಹಾಕಬೇಕು.
ಜ್ವರ, ಡಯಾಬಿಟಿಸ್, ರಕ್ತದೊತ್ತಡ, ಉಸಿರಾಟದ ತೊಂದರೆ ಸೇರಿದಂತೆ ಯಾವ ಬಗೆಯ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ತಕ್ಷಣವೇ ಜಿಲ್ಲಾಮಟ್ಟದ ತಂಡಕ್ಕೆ ಮಾಹಿತಿ ಸಲ್ಲಿಸಬೇಕು.
ಜ್ವರ ಅಥವಾ ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ಕಳಿಸಿಕೊಡಬೇಕು. ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಕೆ ನೀಡಿದರು.
ವೈದ್ಯರು ಮತ್ತು ಸಿಬ್ಬಂದಿಗೆ ಅಗತ್ಯವಿರುವ ಮಾಸ್ಕ್, ಸ್ಯಾನಿಟೈಸರ್ ಮತ್ತಿತರ ಅಗತ್ಯ ವಸ್ತುಗಳನ್ನು ಖರೀದಿಗೆ ಈಗಾಗಲೇ ಎಲ್ಲ ತಾಲ್ಲೂಕುಗಳಿಗೆ ಜಿಲ್ಲಾಧಿಕಾರಿಗಳು ಹಣ ಬಿಡುಗಡೆ ಮಾಡಿರುವುದರಿಂದ ತಕ್ಷಣವೇ ಅಗತ್ಯ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಡಾ.ರಾಜೇಂದ್ರ ತಿಳಿಸಿದರು.
ಕುಡಿಯುವ ನೀರಿನ‌ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆಗೆ ಸೂಚನೆ:
ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಆಹಾರ ಸಾಮಗ್ರಿಗಳನ್ನು ಕಡ್ಡಾಯವಾಗಿ ಮನೆ ಮನೆಗಳಿಗೆ ತೆರಳಿ ವಿತರಿಸಬೇಕು. ಈ ಬಗ್ಗೆ ದೂರುಗಳು ಬಂದರೆ ಸಂಬಂಧಪಟ್ಟವರ ಮೇಲೆ ಕ್ರ‌ಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಸಾಧ್ಯವಿರುವ ಕಡೆಗಳಲ್ಲಿ ಉದ್ಯೋಗ ಖಾತ್ರಿ ಮೂಲಕವು ಜನರಿಗೆ ಉದ್ಯೋಗ ನೀಡುವ ಬಗ್ಗೆ ಪರಿಶೀಲಿಸಬೇಕು. ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ‌.ಎಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ, ಅಶೋಕ ತೇಲಿ, ರವೀಂದ್ರ ಕರಲಿಂಗಣ್ಣವರ, ಎಲ್ಲ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button