
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರ, ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕುಣಿಕೆಯಿಂದ ಪಾರಾಗಿದ್ದಾರೆ.
ಕೆಲ ಷರತ್ತುಗಳನ್ನು ವಿಧಿಸಿ ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ನೀಡಬೇಕು. ಅಲ್ಲದೇ ಸಾಕ್ಷ್ಯಗಳಿಗೆ ಬೆದರಿಕೆ ಹಾಕದಂತೆ ಸೂಚಿಸಿದೆ.
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಈ ಹಿಂದೆ ಬಿ.ನಾಗೇಂದ್ರ ಇಡಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದರು. ಜಾಮೀನು ಮೇಲೆ ಹೊರ ಬಂದಿದ್ದ ಶಾಸಕರಿಗೆ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ನಿಂದ ಬಂಧನ ಭೀತಿ ಎದುರಿಸಿದ್ದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.




