Politics

*ಬಿಜೆಪಿ ಷಡ್ಯಂತ್ರದಿಂದ ಇಡಿ ಅಧಿಕಾರಿಗಳಿಂದ ಬಂಧನ; ವಾಲ್ಮೀಕಿ ಹಗರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ಒತ್ತಡ: ಮಾಜಿ ಸಚಿವ ನಾಗೇಂದ್ರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣದಲ್ಲಿ ಇಡಿಯಿಂದ ಬಂಧಿಸಲ್ಪಟ್ಟಿದ್ದ ಮಾಜಿ ಸಚಿವ ನಾಗೇಂದ್ರ, ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿ ಅಧಿಕಾರದಲ್ಲಿದೆ ಅಲ್ಲೆಲ್ಲ ಸರ್ಕಾರ ಅಸ್ಥಿರಗೊಳಿಸಲು ಷಡ್ಯಂತ್ರ ನಡೆಸಿವೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ನನ್ನ ಪಾತ್ರ ಏನೂ ಇಲ್ಲದಿದ್ದರೂ ಷಡ್ಯಂತ್ರ ನಡೆಸಿ, ಇಡಿಯಿಂದ ನನ್ನನ್ನು ಬಂಧಿಸುವಂತೆ ಬಿಜೆಪಿಯವರು ತಂತ್ರ ರೂಪಿಸಿದರು. ಇಡಿ ಅಧಿಕಾರಿಗಳು ನನಗೆ ಕಿರುಕುಳ ನೀಡಿದ್ದಾರೆ. ಬಂಧನದ ಬಳಿಕ ಕೇಂದ್ರ ಸರ್ಕಾರದ ಒತ್ತಡದ ಮೇರೆಗೆ ನನ್ನ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದ್ದಾರೆ.

ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರು ಹೇಳುವಂತೆ ಒತ್ತಾಯಿಸಿದರು. ಅದಕ್ಕೆ ನಾನು ನಿರಾಕರಿಸಿದೆ. ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ಇನ್ನು ಅವರ ಪಾತ್ರ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದೆ. ಬ್ಯಾಂಕ್ ನಲ್ಲಿ ನಡೆಯುವ ಹಗರಣಗಳಿಗೂ ನಮ್ಮ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಬಿಜೆಪಿಯವರು ಷಡ್ಯಂತ್ರ ನಡೆಸಿ ಹಿಂಸಿಸಿದ್ದಾರೆ. ಮುಡಾ ಪ್ರಕರಣದಲ್ಲಿಯೂ ಬಿಜೆಪಿ ನಾಯಕರ ಷಡ್ಯಂತ್ರವಿದೆ ಎಂದು ಆರೋಪಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button