ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮಂಡ್ಯ, ಮದ್ದೂರು, ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದರೆ ಇನ್ನೊಂದೆ ವಿಪಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ಬರಗಲ ಆರಂಭವಾಗಿದೆ. ಕಾವೇರಿ ಕೊಳ್ಳದಲ್ಲಿ ನೀರಿಲ್ಲ. ಇಂತಹ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಗೆ ರಾಜ್ಯದ ವಸ್ತುಸ್ಥಿತಿ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನೆಲ, ಜಲ, ಭಾಷೆ, ರಾಜ್ಯದ ಜನರ ಹಿತ ಕಾಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕರು ತಮಿಳುನಾಡು ಏಜೆಂಟರಂತೆ ನಡೆದುಕೊಳ್ಳುತ್ತಿದ್ದಾರೆ. ನಿಮಗೆ ಯೋಗ್ಯತೆ ಇದ್ದರೆ ಸಮಸ್ಯೆ ಪರಿಹರಿಸಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು,ಮನೆಗೆ ಹೋಗಿ. ಇದೇ ರೀತಿ ಮುಂದುವರೆದರೆ ಬೆಂಗಳೂರಿನಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಲಿದೆ ಎಂದು ಗುಡುಗಿದ್ದಾರೆ.
ಪ್ರತಿಭಟನೆ ತೀವ್ರಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವರಾದ ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ ಸೇರಿದಂತೆ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ