ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ 2 ದಿನ ಮಾತ್ರ ಬಾಕಿಯಿದ್ದು, ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದ ನಾಯಕರು ಮತದಾರರನ್ನು ಓಲೈಸಲು ಕೊನೇ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್. ಯಡಿಯೂರಪ್ಪ, ರಾಜ್ಯದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ.ನಡ್ಡಾ ಅವರು ಬಂದು ಹಲವಾರು ರೋಡ್ ಶೋ, ಸಮಾವೇಶ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ. ಈ ಬಾರಿ ಬಿಜೆಪಿ 130-135 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ ಎಂದರು.
ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ ಮಾಡಿ ಇತಿಹಾಸ ಸೃಷ್ಟಿಸಿದ್ದೇವೆ. ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹ ಧನವನ್ನು 5 ರೂ ನಿಂದ 7 ರೂ.ಗೆ ಹೆಚ್ಚಿಸುತ್ತೇವೆ. ರೈತಸಿರಿ ಯೋಜನೆಯಡಿ ಪ್ರತಿ ಹೆಕ್ಟೇರ್ ಗೆ 10 ಸಾವಿರ ಹಣ ನೀಡಲು ಯೋಜನೆ ರೂಪಿಸಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ವೀರಶೈವ ಲಿಂಗಾಯಿತರನ್ನು ಓಲಿಸುವ ರಾಜಕಾರನದಲ್ಲಿ ತೊಡಗಿದ್ದಾರೆ. ಆದರೆ ವೀರಶೈವ ಲಿಂಗಾಯಿತರು ನಮ್ಮೊಂದಿಗಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ರಾಜ್ಯವನ್ನು ಅಭಿವೃದ್ಧಿಯಲ್ಲಿ ನಂಬರ್ ಒನ್ ಮಾಡುವ ಭರವಸೆ ನೀಡಿದ್ದಾರೆ. ರಾಜ್ಯದ ಜನರ ಬೆಂಬಲ ಕೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎದುರು ರಾಹುಲ್ ಗಾಂಧಿ ಸರಿಸಮಾನವಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ