*ನಿರೀಕ್ಷೆಯೇ ಇರಲಿಲ್ಲ, ಎಲ್ಲವೂ ವರಿಷ್ಠರ ನಿರ್ಧಾರ ಎಂದ ಮಾಜಿ ಸಿಎಂ ಬಿಎಸ್ ವೈ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಗ ಆಯ್ಕೆಯಾಗಿರುವ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನಿರೀಕ್ಷಿಸಿರಲಿಲ್ಲ. ನಾನು ಯಾರ ಬಳಿಯೂ ವಿಜೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವಂತೆ ಕೇಳಿಯೂ ಇಲ್ಲ. ಪ್ರಧಾನಿ ಮೋದಿಯವರು, ಅಮಿತ್ ಶಾ, ಜೆ.ಪಿ ನಡ್ಡಾ ಸೇರಿ ಈ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.
ವಿಜಯೇಂದ್ರ ಸಮರ್ಥವಾಗಿ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ಎಲ್ಲರಿಗೂ ಇದೆ. ಹಾಗಾಗಿ ಎಲ್ಲರ ನಿರೀಕ್ಷೆಗೆ ತಕ್ಕಂತೆ ವಿಜಯೇಂದ್ರ ಕೆಲಸ ಮಾಡ್ತಾರೆ. ವೀರಶೈವ ಸಮುದಾಯ ನಮ್ಮ ಜೊತೆಗಿದೆ ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇವೆ. ಎಲ್ಲರೂ ಸೇರಿ ಪಕ್ಷವನ್ನು ಬಲಪಡಿಸುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲುತ್ತೇವೆ. ಪ್ರಧಾನಿ ಮೋದಿಯವರನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಅವರ ಹೆಸರಲ್ಲಿ ನಾವು ಗೆಲುವು ಸಾಧಿಸಬೇಕು. ಅವರು ಮತ್ತೆ ದೇಶದ ಪ್ರಧಾನಿಯಾಗಬೇಕು. ಆ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ