Kannada NewsKarnataka NewsPolitics

*ಮತ್ತೆ ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಾದ್ರೆ ಪೊಲೀಸ್ ಠಾಣೆ, ಎಸ್ ಪಿ ಕಚೇರಿಗೆ ಮುತ್ತಿಗೆ*: *ವಿಜಯೇಂದ್ರ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಎಸ್‌ಐಆರ್ ಫಾರಂ-7, ಪರ್ಮನೆಂಟ್ ರೆಸಿಡೆಂಟ್ ಸರ್ಟಿಫಿಕೆಟ್ ವಿತರಣೆ, ಉಪಚುನಾವಣೆ, ಜಿಲ್ಲಾ ಪಂಚಾಯತ್​ ಮತ್ತು ತಾಲೂಕು ಪಂಚಾಯತ್​ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು.

ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ, ಎಸ್‌ಐಆರ್ ಫಾರಂ-7 ವಿಚಾರದಲ್ಲಿ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು. ಎಸ್‌ಐಆರ್ ಫಾರಂ-7 ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ. ಚುನಾವಣಾ ಆಯೋಗದ ನಿಯಮಾನುಸಾರ ಫಾರಂ-7 ಸಲ್ಲಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಸರ್ಕಾರ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್ ಕೂಡ ಚಾಟಿ ಬೀಸಿದೆ ಎಂದರು.

ಇಷ್ಟಾದರೂ ನಮ್ಮ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುವುದನ್ನು ಮುಂದುವರಿಸಿದರೆ, ಬಿಜೆಪಿ ಸುಮ್ಮನೆ ಕೂರುವುದಿಲ್ಲ. ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವ ನಿರ್ಧಾರವನ್ನು ಕೋರ್ ಕಮಿಟಿ ಕೈಗೊಂಡಿದೆ ಎಂದು ವಿಜಯೇಂದ್ರ ತಿಳಿಸಿದರು.

ಪರ್ಮನೆಂಟ್ ರೆಸಿಡೆಂಟ್ ಸರ್ಟಿಫಿಕೆಟ್ ನೀಡುವ ಅಧಿಕಾರವನ್ನು ಪಂಚಾಯತ್​ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಮುನ್ಸಿಪಲ್ ಕಮಿಷನರ್‌ಗಳಿಗೆ ನೀಡಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಇಂತಹ ಪ್ರಮಾಣಪತ್ರಗಳನ್ನು ವಿತರಿಸುವ ಅಧಿಕಾರವನ್ನು ತಹಶೀಲ್ದಾರ್ ಮತ್ತು ಅವರ ಮೇಲಿನ ಹಂತದ ಅಧಿಕಾರಿಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ರಾಜ್ಯ ಸರ್ಕಾರ ತಕ್ಷಣ ಈ ನಿರ್ಧಾರವನ್ನು ಹಿಂಪಡೆಯಬೇಕು. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯುವುದರ ಜೊತೆಗೆ ಚುನಾವಣಾ ಆಯೋಗದ ಗಮನಕ್ಕೂ ವಿಷಯವನ್ನು ತರಲು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಉಪಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಮೈತ್ರಿಯ ಸಮನ್ವಯದೊಂದಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯತ್​ ಚುನಾವಣೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಮೀಸಲಾತಿ ವರ್ಗಗಳನ್ನು ಪ್ರಕಟಿಸಿದೆ. ಆದರೆ, ಮೀಸಲಾತಿ ಪಟ್ಟಿಯಲ್ಲಿ ಕೆಲವು ಗೊಂದಲಗಳು ಕಂಡುಬರುತ್ತಿವೆ. ಕೆಲವು ನಿರ್ಧಾರಗಳು ಆಡಳಿತ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ರೂಪುಗೊಂಡಿವೆ ಎಂಬ ಆತಂಕವೂ ಇದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button