*ಜೈಲಿನ ಚಳಿಗೆ ಬೆನ್ನುನೋವು ಮತ್ತೆ ಉಲ್ಬಣ*: *ಫಿಸಿಯೋಥೆರಪಿಗೆ ದರ್ಶನ್ ಮನವಿ!*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವು ಕಾಣಿಸಿಕೊಂಡಿದೆ. ಜೈಲಿನಲ್ಲಿ ವಿಪರೀತ ಚಳಿ ಇರುವುದರಿಂದ ನೋವು ಹೆಚ್ಚಾಗಿದೆ ಎಂದು ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ದರ್ಶನ್ ತಿಳಿಸಿದ್ದಾರೆ. ಬೆನ್ನುನೋವಿಗೆ ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆ ತಮ್ಮ ಆರೋಗ್ಯ ಸಮಸ್ಯೆಯನ್ನು ವಿವರಿಸಿದ ದರ್ಶನ್, ಬೆನ್ನುನೋವು ತೀವ್ರವಾಗಿದ್ದು ಸೂಕ್ತ ಫಿಸಿಯೋಥೆರಪಿ ಚಿಕಿತ್ಸೆ ಅಗತ್ಯವಿದೆ ಎಂದು ತಿಳಿಸಿದರು. ದರ್ಶನ್ ಮನವಿಯನ್ನು ಆಲಿಸಿದ ನ್ಯಾಯಾಲಯ, ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಜೈಲು ನಿಯಮಗಳ ಪ್ರಕಾರ ಸೂಕ್ತ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್‌ಗಳೊಂದಿಗೆ ರಾಜಾತಿಥ್ಯ ಪಡೆದ ಆರೋಪ ಕೇಳಿಬಂದ ಬಳಿಕ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಅಲ್ಲಿಯೂ ಬೆನ್ನುನೋವಿನಿಂದ ಬಳಲುತ್ತಿದ್ದ ದರ್ಶನ್, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂಬ ಕಾರಣ ನೀಡಿ ಹೈಕೋರ್ಟ್‌ನಿಂದ ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದಿದ್ದರು.
ಮಧ್ಯಂತರ ಜಾಮೀನಿನ ಅವಧಿ ಮುಗಿದ ಬಳಿಕ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಗಾದ ದರ್ಶನ್, ಈಗ ಬೆನ್ನುನೋವು ಮರುಕಳಿಸಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಹಿಂದೆ ಶಸ್ತ್ರಚಿಕಿತ್ಸೆಗಾಗಿ ಜಾಮೀನು ಪಡೆದಿದ್ದರೂ ಶಸ್ತ್ರಚಿಕಿತ್ಸೆಗೆ ಒಳಗಾಗಿರಲಿಲ್ಲ ಎಂದು ವರದಿಯಾಗಿದೆ.
ಇದೀಗ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ದರ್ಶನ್ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಜೈಲು ನಿಯಮಗಳ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಬೇಕಿದೆ. ಚಿಕಿತ್ಸೆ ಪಡೆಯಲು ಅವಕಾಶ ಸಿಗುತ್ತದೆಯೇ ಎಂಬುದು ಮುಂದಿನ ಬೆಳವಣಿಗೆಯಲ್ಲಿ ಸ್ಪಷ್ಟವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




