
ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಕೊರೊನಾ ಸೋಂಕು, ಲಾಕ್ ಡೌನ್, ಶಾಲೆಗಳಿಗೆ ರಜೆ ಘೋಷಣೆ ಬೆನ್ನಲ್ಲೇ ರಾಜ್ಯದಲ್ಲಿ ಬಾಲ್ಯವಿವಾಹ ಪ್ರಕರಣಗಳು ಯಥೇಚ್ಚವಾಗಿ ನಡೆಯುತ್ತಿದೆ. ಅಧಿಕಾರಿಗಳಿಗೇ ಸುಳ್ಳು ಹೇಳಿ ರಾತ್ರಿ ಬೆಳಗಾಗುವಷ್ಟರಲ್ಲಿ ಬಾಲಕಿಗೆ ಪೋಷಕರು ವಿವಾಹ ಮಾಡಿ ಮುಗಿಸಿದ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ.
ಇಲ್ಲಿನ ಹುನಗುಂದ ತಾಲೂಕಿನ ಗ್ರಾಮವೊಂದರಲ್ಲಿ ಬಾಲ್ಯವಿವಾಹದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಈ ವೇಳೆ ಪೋಷಕರು ನಮ್ಮ ಮನೆಯಲ್ಲಿ ಸಾವು ಸಂಭವಿಸಿದೆ. ಇಂತಹ ಸಂದರ್ಭದಲ್ಲಿ ನಾವು ಏಕೆ ಮದುವೆ ಮಾಡಿಸುತ್ತೇವೆ ಎಂದು ಅಧಿಕಾರಿಗಳು ಯಾಮಾರಿಸಿದ್ದರು. ಅಧಿಕಾರಿಗಳು ವಾಪಸ್ ಆಗುತ್ತಿದ್ದಂತೆಯೇ ರಾತ್ರೋರಾತ್ರಿ ಬಾಲಕಿಗೆ ಮದುವೆ ಮಾಡಿಸಿ ಬೇರೆಡೆ ಬಚ್ಚಿಟ್ಟಿದ್ದರು.
ವಿಷಯ ತಿಳಿಯುತ್ತಿದ್ದಂತೆ ಮತ್ತೆ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಬಾಲಕಿ ಮೊಬೈಲ್ ಲೊಕೇಷನ್ ಆಧರಿಸಿ ಪತ್ತೆ ಹಚ್ಚಿದ್ದಾರೆ. ಬಾಲಕಿಯನ್ನು ರಕ್ಷಿಸಿ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ