Karnataka News

ಜನಾರ್ಧನ ರೆಡ್ಡಿ ಪಕ್ಷ ಸೇರಿದ ಬಿಜೆಪಿ ಉಪಾಧ್ಯಕ್ಷ

ಪ್ರಗತಿ ವಾಹಿನಿ ಸುದ್ದಿ, ಬಳ್ಳಾರಿ: ಇತ್ತೀಚೆಗಷ್ಟೇ ಹೊಸ ಪಕ್ಷ ಸ್ಥಾಪಿಸಿ ಬಿಜೆಪಿಗೆ ಗಾಲಿ ಜನಾರ್ಧನ ರೆಡ್ಡಿ ಠಕ್ಕರ್ ನೀಡಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಬಳ್ಳಾರಿ ಭಾಗದ ಕೆಲ ಕಾರ್ಯಕರ್ತರು, ಪದಾಧಿಕಾರಿಗಳು ಜನಾರ್ಧನ ರೆಡ್ಡಿ ಅವರ ಹೊಸ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗುತ್ತಿದೆ.
 ಡಿಸೆಂಬರ್ 25, 2022ರಂದು ಬಳ್ಳಾರಿ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ  ಪಕ್ಷ’ ಎಂಬ ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ.
ಈಗ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ಗಾಲಿ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗರಾಗಿರುವ ದಮ್ಮೂರು ಶೇಖರ್ ಅವರು ಬಿಜೆಪಿ ತೊರೆದಿದ್ದಾರೆ.
ಗಾಲಿ ಜನಾರ್ದನ ರೆಡ್ಡಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಘೋಷಣೆ ನಂತರ ಬಿಜೆಪಿಯ ಮೊದಲ ವಿಕೆಟ್ ಪತನವಾಗಿದೆ. ಗಾಲಿ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್, ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿದ್ದರು. ಈಗ ಬಿಜೆಪಿ ಪಕ್ಷ ತೊರೆಯುವ ಮೂಲಕ ದಮ್ಮೂರು ಶೇಖರ್, ರಾಜೀನಾಮೆ ನೀಡಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.
ಗಾಲಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆಯಾಗುತ್ತಿದ್ದಂತೆ ರಾಜಕೀಯದಲ್ಲಿ ಬಿರುಗಾಳಿ ಅಲೆ ಏಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
ಅದರ ಮೊದಲು ಎಂಬಂತೆ ಈಗ ದಮ್ಮೂರು ಶೇಖರ್, ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಇವರು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರೂ ಸಹ ಆಗಿದ್ದರು.
ಈ ಬಗ್ಗೆ ದಮ್ಮೂರು ಶೇಖರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅನೇಕ ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಜವಾಬ್ದಾರಿ ಚೆನ್ನಾಗಿ ನಿಭಾಯಿಸಿದ್ದೇನೆ. ಪಕ್ಷ ಕಟ್ಟುವಲ್ಲಿ ಅಳಿಲು ಸೇವೆ ಸಲ್ಲಿಸಿದ್ದೇನೆ. ಇಷ್ಟು ವರ್ಷ ಪಕ್ಷದ ಸೇವೆಗೆ ಅವಕಾಶ ಮಾಡಿ ಕೊಟ್ಟಿದ್ದಕ್ಕೆ ಧನ್ಯವಾದ ಎಂದಿದ್ದಾರೆ.
ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಗಾಲಿ ಜನಾರ್ದನ ರೆಡ್ಡಿ ಅವರು ಸಾಕಷ್ಟು ಶ್ರಮ ವಹಿಸಿದ್ದರು. ಬಿಜೆಪಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲು ಗಾಲಿ ಜನಾರ್ದನ ರೆಡ್ಡಿ ಅವರ ಪಾತ್ರ ಪ್ರಮುಖವಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಬಿಜೆಪಿ ಜನಾರ್ದನ ರೆಡ್ಡಿ ಅವರನ್ನ ನಡೆಸಿಕೊಂಡ ರೀತಿ ಸ್ವಲ್ಪವೂ ಸರಿಯಿಲ್ಲ.
ಹಾಗಾಗಿ ಇದೇ ಕಾರಣದಿಂದ ತಾವು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದು, ಪಕ್ಷವನ್ನು ತೊರೆಯುತ್ತಿರುವುದಾಗಿ ದಮ್ಮೂರು ಶೇಖರ್ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ರಾಜೀನಾಮೆ ಪತ್ರವನ್ನು ಈಗಾಗಲೇ ಬಳ್ಳಾರಿ ಜಿಲ್ಲಾಧ್ಯಕ್ಷರಿಗೆ ಸಲ್ಲಿಕೆ ಮಾಡಿದ್ದಾರೆ.
ಮೊಟ್ಟ ಮೊದಲ ಬಾರಿಗೆ ಕುರುಬ ಸಮಾಜಕ್ಕಾಗಿ ಹೋರಾಡಿ ನನ್ನನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧ್ಯಕ್ಷನನ್ನಾಗಿಸಿ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದ ಜನಾರ್ದನ ರೆಡ್ಡಿ ಅವರನ್ನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ ಎಂದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button