ಬೆಳಗಾವಿ : ಪ್ಲಾಸ್ಟಿಕ್ ಬಳಕೆ ನಿಷೇಧ, ಅಂಗಡಿ ಮಾಲಿಕರ ಗಮನಕ್ಕೆ
ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಎಲ್ಲ ಬಗೆಯ ಅಂಗಡಿ-ಮುಂಗಟ್ಟುಗಳು, ವ್ಯಾಪಾರ-ವಹಿವಾಟುಗಳುಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುವುದು ಕಂಡು ಬಂದಲ್ಲಿ ಮಹಾನಗರ ಪಾಲಿಕೆಯಿಂದ ನೀಡಿದ ಉದ್ದಿಮೆ ಪರವಾನಿಗೆ ರದ್ದು ಮಾಡುವ ಕ್ರಮಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ ಅವರು ತಿಳಿಸಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಬಾಗ್ ಮತ್ತು ಇತರೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದು ಅಥವಾ ಉಪಯೋಗಿಸುವುದು ಸರ್ಕಾರಿ ಆದೇಶದ ಉಲ್ಲಂಘನೆಯಾಗುತ್ತಿದ್ದು, ಸಾರ್ವಜನಿಕರು ತಾವು ದಿನನಿತ್ಯ ಉಪಯೋಗಿಸುವ ವಸ್ತುಗಳನ್ನು ಕೊಂಡೊಯ್ಯಲು ಪರ್ಯಾಯವಾಗಿ ಬಟ್ಟೆ ಚೀಲಗಳನ್ನು, ಪೇಪರ್ ಬ್ಯಾಗ್ ಬಳಸಿ ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಲು ವಿನಂತಿಸಿದೆ.
ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ನಾಗರಿಕರಿಂದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಕಂಡು ಬಂದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು, ಕಂದಾಯ ನಿರೀಕ್ಷಕರನ್ನೊಳಗೊಂಡ ತಂಡಗಳು ನಿಯತಕಾಲಿಕವಾಗಿ ತಪಾಸಣೆ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ನಿಯಮಾನುಸಾರ ದಂಡ ವಿಧಿಸುವ ಕ್ರಮವನ್ನು ಕೈಗೊಳ್ಳುವರು ಎಂಬ ಮಾಹಿತಿಯನ್ನು ಈ ಪ್ರಕಟಣೆ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ. ಆದ್ದರಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ಸಮಸ್ತ ನಾಗರಿಕರು ಸಹಕರಿಸುವಂತೆ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ