
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಐಸಿಸ್ ಉಗ್ರರು ಸಕ್ರಿಯರಾಗಿದ್ದಾರೆ ಎಂಬ ವಿಶ್ವಸಂಸ್ಥೆ ಎಚ್ಚರಿಕೆ ಹಿನ್ನಲೆಯಲ್ಲಿ ಐಸಿಸ್ ಸೇರಿ ಇತರೆ ಉಗ್ರ ಸಂಘಟನೆಗಳ ಚಟುವಟಿಕೆಗಳನ್ನು ಕಟ್ಟಿಹಾಕಲು ನಾವೂ ಪಣತೊಟ್ಟಿದ್ದೇವೆ. ಹೀಗಾಗಿ ರಾಷ್ಟ್ರೀಯ ತನಿಖಾ ದಳ ಎನ್ಐಎದೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯಮಾಡಿಕೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕರ್ನಾಟಕ ಹಾಗೂ ಕೇರಳದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವರು, ನಾವು ಎನ್ಐಎಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದೇವೆ. ನಿರಂತರವಾಗಿ ಉಗ್ರರ ಚಟುವಟಿಕೆ ತಡೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕರ್ನಾಟಕ ಪೊಲೀಸರು ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಅಂತೆಯೇ ಕೇವಲ ಎನ್ಐಎ ಮಾತ್ರವಲ್ಲದೇ, ಕೇರಳ, ತಮಿಳುನಾಡು, ತೆಲಂಗಾಣ ಪೊಲೀಸರ ಜೊತೆಯೂ ಸಂಪರ್ಕದಲ್ಲಿದ್ದೇವೆ. ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಕಾರ್ಯಾಚರಣೆ ಮೇಲೆಯೇ ವಿಶ್ವಸಂಸ್ಥೆ ವರದಿ ನೀಡಿದೆ. ರಾಜ್ಯದಲ್ಲಿ ಯಾವುದೇ ಉಗ್ರ ಚಟುವಟಿಕೆಗೆ ಅವಕಾಶ ಕೊಟ್ಟಿಲ್ಲ. ಮುಂದೆಯೂ ಕೊಡುವುದಿಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ