ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟಾಚಾರವನ್ನು ತಡೆಯಲೆಂದೇ ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿದ್ದೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ಪೊಲೀಸರು ನಿಸ್ಪಕ್ಷಪಾತ ತನಿಖೆ ನಡೆಸಲಿ. ಇನ್ನು ಕಾಂಗ್ರೆಸ್ ಅವಧಿಯಲ್ಲಿಯೂ ಹಲವು ಶಾಸಕರ ಮೇಲೆ ಆರೋಪ ಇತ್ತು. ಅವೆಲ್ಲವನ್ನೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಚ್ಚಿ ಹಾಕಲಾಗಿತ್ತು. ಅವುಗಳ ತನಿಖೆಯೂ ಆಗಲಿ ಎಂದರು.
ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರುವುದೇ ಭ್ರಷ್ಟಾಚಾರ ತೊಡೆದು ಹಾಕುವುದಕ್ಕೆ. ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್ ಗಳು ಮುಚ್ಚಿ ಹೋಗಿದ್ದವು. ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ. ನಾವು ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ