ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದ್ದು, ಇದೀಗ ಈ ಬಗ್ಗೆ ಸ್ವತ: ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.
ವಿಧಾನಪರಿಷತ್ ಚುನಾವಣೆಗೆ ಎರಡು ಹೆಸರು ಹೋಗಿದೆ. ಹೊರಟ್ಟಿ ಹೆಸರು ಇದ್ದರೂ ಇರಬಹುದು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಪೀಕರ್ ಹೊರಟ್ಟಿ, ಪ್ರಹ್ಲಾದ್ ಜೋಶಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ನನ್ನ ಮೇಲೆ ಪ್ರೀತಿ ಜಾಸ್ತಿ, ಅದಕ್ಕಾಗಿ ಕಾಳಜಿ ವಹಿಸುತ್ತಾರೆ. ಬಿಜೆಪಿ ಸೇರುವ ಬಗ್ಗೆ ನಾನು ಯಾವುದೇ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.
ಮೇ ವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಮೇ ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಇದೇ ವೇಳೆ ಸದನದಲ್ಲಿ ಕಾಂಗ್ರೆಸ್ ಧರಣಿ ವಿಚಾರವಾಗಿ ಮಾತನಾಡಿದ ಸ್ಪೀಕರ್, ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಗಿದೆ ಎಂಬಂತೆ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ನಾವು ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದ್ದೇವೆ. ಓರ್ವ ಸಭಾಪತಿಯಾಗಿ ನಾನು ಈ ಮಾತು ಹೇಳುತ್ತಿಲ್ಲ, ಸಾಮಾನ್ಯ ಪ್ರಜೆಯಾಗಿ ಹೇಳುತ್ತಿದ್ದೇನೆ. ಕಲಾಪದಲ್ಲಿ ಯಾವುದೇ ಚರ್ಚೆ ನಡೆಸುತ್ತಿಲ್ಲ, ಕೋಟ್ಯಂತರ ರೂಪಾಯಿ ಹಣ ವ್ಯರ್ಥವಾಗುತ್ತಿದೆ. ಕಾಂಗ್ರೆಸ್ ನಾಯಕರ ನಡೆಯಿಂದ ತುಂಬಾ ನೋವಾಗಿದೆ. ಅವರ ಮನವೊಲಿಕೆಗೆ ನಾನು ಯತ್ನಿಸುತ್ತೇನೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ