Belagavi NewsBelgaum NewsPolitics

*ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ: ಕಾರ್ಯಕ್ರಮದ ಮಾಹಿತಿ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಡಿಸೆಂಬರ್.26ರಿಂದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾತನಾಡಿದ ಡಿಸಿಎಂ, ಡಿ.26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದರು.

ಡಿ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ವಿವರಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ಇದು ಪಕ್ಷದ ಕಾರ್ಯಕ್ರಮವಲ್ಲ, ದೇಶದ, ಪ್ರಜಾಪ್ರಭುತ್ವದ ಕಾರ್ಯಕ್ರಮ. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು.

ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದೆ. ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರು, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button