*ಬೆಳಗಾವಿಯಲ್ಲಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ: ಬಸ್ ವ್ಯವಸ್ಥೆ ಕಲ್ಪಿಸುವಂತೆ ರಸ್ತೆ ತಡೆ ನಡೆಸಿ ಧರಣಿ*

ಪ್ರಗತಿವಾಹಿನಿ ಸುದ್ದಿ: ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಸುವರ್ಣಸೌಧದ ಬಳಿ ಬೆಳಗಾವಿ ತಾಲೂಕಿನ ಕೊಂಡಸಕಪ್ಪ ಗ್ರಾಮದ ವಿದ್ಯಾರ್ಥಿಗಳು ಏಕಾಏಕಿ ಪ್ರತಿಭಟನೆ ನಡೆಸಿದ್ದು, ನಮ್ಮೂರಿಗೆ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ರಸ್ತೆಯಲ್ಲಿಯೇ ಪಟ್ಟು ಹಿಡಿದು ಕುಳಿತಿದ್ದಾರೆ. ರಸ್ತೆ ತಡೆನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ವಾಹನ ಸಂಚಾರ ಕೆಲ ಕಾಲ ಬಂದ್ ಆಗಿದ್ದು, ಕಿಲೋಮೀಟರ್ ಗಟ್ಟೆಲೆ ಟ್ರಾಫಿಕ್ ಜಾಮ್ ಸಂಭವಿಸಿತು. ಘಟನ ಅಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ದೌಡಾಯಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಹಲವು ಬಾರಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಕಂಡಸಕಪ್ಪ ಗ್ರಾಮಕ್ಕೆ ಬಸ್ ವ್ಯವಸ್ಥೆಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ತೆರಳಲು ಸಂಕಷ್ಟ ಎದುರಾಗಿದೆ. ಗ್ರಾಮಸ್ಥರಿಗೂ ತೊಂದರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ನಿಮೂರಿಗೆ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಪೊಲೀಸರು ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಧರಣಿ ಕೈಬಿಟ್ಟಿದ್ದಾರೆ.