ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಇಂದಿನಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆದಿದ್ದು, ಈ ಹಂತದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದೆ. ಕಳೆದ ಒಂದುವರೆ ತಿಂಗಳ ಬಳಿಕ ಇಂದಿನಿಂದ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ.
ಇಲ್ಲಿನ 10 ಪ್ರದೇಶಗಳನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಈ ಕಂಟೈನ್ಮೆಂಟ್ ಝೋನ್ ಗಳಲ್ಲಿ ಮದ್ಯ ಸಿಗಲಾರದು. ಬೆಳಗಾವಿ ನಗರದ ಕ್ಯಾಂಪ್ ಪ್ರದೇಶ, ಅಮನ್ ನಗರ, ಆಜಾದ್ ಗಲ್ಲಿ, ಸಂಗಮೇಶ್ವರ ನಗರ, ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ, ಬೆಳಗುಂದಿ, ಪೀರನವಾಡಿ, ಯಳ್ಳೂರು, ಹುಕ್ಕೇರಿ ತಾಲೂಕಿನ ಸಂಕೇಶ್ವರ, ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಎಣ್ಣೆ ಸಿಗಲ್ಲ.
ಈ 10 ಕಂಟೈನ್ಮೆಂಟ್ ಝೋನ್ ನಲ್ಲಿ ಎಣ್ಣೆ ಮಾರಾಟ ಮಾಡಿದರೆ ಅಂಗಡಿಯ ಪರವಾನಗಿ ರದ್ದು ಮಾಡಲಾಗುತ್ತದೆ. ಆರೆಂಜ್ ಝೋನ್ ಬೆಳಗಾವಿಯಲ್ಲಿ ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಲಾಕ್‍ಡೌನ್ ಸಡಿಲಿಕೆ ಮಾಡಲಾಗಿದೆ. 10 ಪ್ರದೇಶ ಹೊರತುಪಡಿಸಿ ಉಳಿದೆಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಬೆಳಗಾವಿ ತಾಲೂಕು, ಹುಕ್ಕೇರಿ ತಾಲೂಕಿನ ಸಂಕೇಶ್ವರ, ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಮೂರು ತಾಲೂಕು ಹೊರತುಪಡಿಸಿ ಉಳಿದೆಡೆ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯವಾಗಿದ್ದು, ಮಾಸ್ಕ್ ಧರಿಸದಿದ್ದರೆ, ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ದಂಡ ವಿಧಿಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ