ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ 8 ನವಿಲುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ 8 ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ನವಿಲುಗಳ ಮೃತದೇಹ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.
ನವಿಲುಗಳ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಝಳಕಿ ಗ್ರಾಮದ ನಿವಾಸಿ ಮಂಜುನಾಥ್ ಪವಾರ್ ಎಂದು ಗುರುತಿಸಲಾಗಿದ್ದು, ಈತ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ.
ನವಿಲು ಮಾಂಸಕ್ಕಾಗಿ ಮೆಕ್ಕೆಜೋಳದ ಕಾಳುಗಳಲ್ಲಿ ವಿಷ ಬೆರೆಸಿ ನವಿಲುಗಳನ್ನು ಕೊಲ್ಲಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ