Kannada NewsLatest

ಎರಡನೇ ಹಂತದ ಚುನಾವಣೆ: 1789 ಮತಗಟ್ಟೆಗಳು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎರಡನೇ ಹಂತದಲ್ಲಿ‌ ಗ್ರಾಮ‌ ಪಂಚಾಯತಿ ಚುನಾವಣೆ ನಡೆಯಲಿರುವ ಚಿಕ್ಕೋಡಿ ಮತ್ತು ರಾಯಬಾಗ ತಾಲ್ಲೂಕುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಸ್ಟರಿಂಗ್, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸೇರಿದಂತೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಎರಡೂ ತಾಲ್ಲೂಕುಗಳಿಗೆ ಶನಿವಾರ (ಡಿ.27) ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಸ್ಟರಿಂಗ್ ವ್ಯವಸ್ಥೆ ಮತ್ತು ‌ಮತ ಎಣಿಕೆ‌ ಕೇಂದ್ರಗಳನ್ನು ವೀಕ್ಷಿಸಿದರು.

ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಮತದಾನದ ಬಳಿಕ ಮತ ಎಣಿಕೆ ಕೇಂದ್ರಗಳಿಗೆ ಅಗತ್ಯ ಭದ್ರತೆ ಕಲ್ಪಿಸುವುದು ಸೇರಿದಂತೆ ಮತ ಎಣಿಕೆಗೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನ್ಯಾಯಸಮ್ಮತ ಮತ್ತು ಪಾರ್ದರ್ಶಕ ಚುನಾವಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಚಿಕ್ಕೋಡಿ ಮತ್ತು ರಾಯಬಾಗ ತಾಲ್ಲೂಕುಗಳಲ್ಲಿರುವ ಮತಗಟ್ಟೆಗಳು ಮತ್ತು ಮತ ಎಣಿಕೆ‌ ಕೇಂದ್ರದ ಸಿದ್ಧತೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಡಿ.27 ರಂದು ಎರಡನೇ ಹಂತದ ಮತದಾನ:

ಗ್ರಾಮ ಪಂಚಾಯತಿ ಚುನಾವಣೆಗೆ ಎರಡನೇ ಹಂತದಲ್ಲಿ ಡಿ‌.27 ರಂದು ಏಳು ತಾಲ್ಲೂಕುಗಳಲ್ಲಿ ಮತದಾನ ನಡೆಯಲಿದ್ದು, ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ ಚಿಕ್ಕೋಡಿ, ರಾಯಬಾಗ, ಅಥಣಿ, ಕಾಗವಾಡ, ನಿಪ್ಪಾಣಿ, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕುಗಳಲ್ಲಿ ಮತದಾನ ನಡೆಯಲಿದೆ. ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಎರಡನೇ ಹಂತದಲ್ಲಿ ಡಿ.27 ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಕ್ರಿಯೆಗಳು ಮತ್ತು ನಿಯಮಾವಳಿ ಪಾಲನೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗಿದ್ದು, ಆದಾಗ್ಯೂ ಸಂದೇಹಗಳು ಬಂದರೆ ಕೂಡಲೇ ಸಂಬಂಧಿಸಿದ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ ಹಾಗೂ ಸವದತ್ತಿ ‌ಮತ್ತು‌ ರಾಮದುರ್ಗ ತಾಲ್ಲೂಕುಗಳ ತಹಶೀಲ್ದಾರರು ಈ ಸಂದರ್ಭದಲ್ಲಿ ಹಾಜರಿದ್ದರು.

1789 ಮತಗಟ್ಟೆಗಳು ಸ್ಥಾಪನೆ:

ಎರಡನೇ ಹಂತದಲ್ಲಿ ಏಳು ತಾಲ್ಲೂಕುಗಳಲ್ಲಿ ನಡೆಯಲಿರುವ ಚುನಾವಣೆಗೆ ಒಟ್ಟು 1789 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

1694 ಮತಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಶೇ.10 ರಷ್ಟು ಹೆಚ್ಚುವರಿ ಸೇರಿದಂತೆ ಒಟ್ಟಾರೆ 9325 ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button