ಕೊರೊನಾ ಭೀತಿ: ಕೋವಿಡ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ; ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರೂಪಾಂತರಿ ಕೋವಿಡ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ಧೇಶದಿಂದ ಮುಂಬರುವ ಹಬ್ಬ, ಉತ್ಸವಗಳು ಮತ್ತಿತರ ಸಂದರ್ಭಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ ಆಚರಣೆ ಹಾಗೂ ಜನಸಮೂಹ ಸೇರುವಿಕೆಯನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಪಿ.ರವಿಕುಮಾರ್ ಅವರು ಗುರುವಾರ (ಮಾ.25) ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಮುಂಬರಲಿರುವ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೇ ಇತ್ಯಾದಿ ಹಬ್ಬಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸುವುದನ್ನು ನಿರ್ಬಂಧಿಸಲಾಗಿರುತ್ತದೆ.
ನೆರೆಯ ರಾಜ್ಯಗಳು ಸೇರಿದಂತೆ ಕರ್ನಾಟಕದಲ್ಲೂ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿರುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಒಂದು ವೇಳೆ ಯಾರಾದರೂ ಈ ಆದೇಶವನ್ನು ಉಲ್ಲಂಘಿಸಿರುವುದು ಕಂಡುಬಂದರೆ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರ ಕಲಂ 51 ರಿಂದ 60; ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಕಲಂ 4, 5 ಮತ್ತು ರ ಪ್ರಕಾರ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೇ ಇತ್ಯಾದಿ ಹಬ್ಬಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸುವುದಕ್ಕೆ ಅವಕಾಶವಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಈ ಆದೇಶ ಪಾಲನೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ