ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್-19 ರೂಪಾಂತರಿ ವೈರಾಣು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತ ದೃಷ್ಟಿಯಿಂದ ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ ಸ್ಥಾಪನೆ ಸೇರಿದಂತೆ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಾದ್ಯಂತ ಕೋವಿಡ್-19 ರೂಪಾಂತರಿ ವೈರಾಣುವಿನ ಸ್ಫೋಟ ಮತ್ತು ಹರಡುವುದನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಪಕ್ಕದ ಮಹಾರಾಷ್ಟ್ರ ರಾಜ್ಯದಿಂದ ಬೆಳಗಾವಿ ನಗರ ಹಾಗೂ ಬೆಳಗಾವಿ ಜಿಲ್ಲೆಗೆ ವಿಮಾನ/ಬಸ್ಸು/ರೈಲು ಹಾಗೂ ಖಾಸಗಿ ವಾಹನಗಳ ಮೂಲಕ ಪ್ರಯಾಣಿಸುವ ಸಾರ್ವಜನಿಕರ ಪ್ರವೇಶದ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದಿದ್ದಾರೆ.
ಎಲ್ಲ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ಮಹಾರಾಷ್ಟ್ರದಿಂದ ಜಿಲ್ಲೆಯ ಮೂಲಕ ಕರ್ನಾಟಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಕಳೆದ 72 ಗಂಟೆಗಳ ಒಳಗಾಗಿ ಪಡೆದ ನೆಗೆಟಿವ್ ಆರ್‌ಟಿ-ಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯಪಡಿಸಲಾಗಿದೆ. ಇದನ್ನು ಜಿಲ್ಲೆಯ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲಿಸಿದ ಬಳಿಕ ಪ್ರಯಾಣಿಕರು ರಾಜ್ಯವನ್ನು ಪ್ರವೇಶಿಸಲು ಅವಕಾಶವನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜನರಲ್ ಮ್ಯಾನೇಜರ್, Southern Western Railways, ಹುಬ್ಬಳ್ಳಿ, ಸಾಂಬ್ರಾ ವಿಮಾನ ನಿಲ್ದಾಣ ನಿರ್ದೇಶಕರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಬೆಳಗಾವಿ/ಚಿಕ್ಕೋಡಿ, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ/ಚಿಕ್ಕೋಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಬೆಳಗಾವಿ ಮತ್ತು ಹೆಚ್ಚುವರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳು ಮತ್ತು ತಹಶೀಲದಾರರು ಹಾಗೂ ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳು ಸದರಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಪ್ರಯಾಣಿಕರ ತಪಾಸಣೆಗೆ ಕ್ರಮ ಕೈಗೊಳ್ಳಬೇಕು ಎಂಬ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದ್ದಾರೆ.
ಕೊಗನೊಳ್ಳಿ ಚೆಕ್ ಪೋಸ್ಟ್ ಗೆ ಡಿಸಿ ಭೇಟಿ:
ಕೋವಿಡ್-19 (ಕೊರೋನಾ)ರೂಪಾಂತರಿ ವೈರಾಣು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಕೊಗನೊಳ್ಳಿ ಸಮೀಪ ಆರಂಭಿಸಲಾಗಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ(ಫೆ.22) ಸಂಜೆ ಭೇಟಿ ನೀಡಿ ಪರಿಶೀಲಿಸಿದರು.
ಮಹಾರಾಷ್ಟ್ರದಿಂದ ರಾಜ್ಯವನ್ನು ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರ ಕಡ್ಡಾಯವಾಗಿ ಕೋವಿಡ್ ಆರ್.ಟಿ.-ಪಿಸಿಆರ್ ತಪಾಸಣಾ ವರದಿಯನ್ನು ಪರಿಶೀಲಿಸಬೇಕು ಎಂದು ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಸರ್ಕಾರದ ನಿರ್ದೇಶನದ ಪ್ರಕಾರ ಈಗಾಗಲೇ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಸವದತ್ತಿ ಯಲ್ಲಮ್ಮ ಹಾಗೂ ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನಕ್ಕೆ ಸಾರ್ವಜನಿಕ ದರ್ಶನವನ್ನು ಕೂಡ ನಿರ್ಬಂಧಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ