*ಕೋವಿಡ್ ರೂಪಾಂತರಿ ವೈರಸ್ ಹೆಚ್ಚಳ; ಬೆಳಗಾವಿಯಲ್ಲಿ ಹೈ ಅಲರ್ಟ್*
ಗಡಿ ಭಾಗದಲ್ಲಿ ತಪಾದಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್ ರೂಪಾಂತರಿ ವೈರಸ್ JN.1 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ಕಟ್ಟೆಚ್ಚರವಹಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ಐಸಿಯು ಬೆಡ್ ಗಳ ಕೊರತೆ ಆಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಗಂಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಿಸುವಂತೆ ಸೂಚಿಸಿದರು.
ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ಇರುವವರಿಗೆ ಕೋವಿಡ್ ಟೆಸ್ಟ್ ಗೆ ಒಳಪಡಿಸಬೇಕು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪಿಸುವಂತೆ ತಿಳಿಸಿದರು.
ಜ್ವರ, ನೆಗಡಿ, ಕೆಮ್ಮು ಇರುವವರು ತಕ್ಷಣ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಲು ಹಾಗೂ ಕೋವಿಡ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಅನುಸರಿಸುವಂತೆ ಸಲಹೆ ನೀಡಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಕೋವಿಡ್ ಬಗ್ಗೆ ಹೆಚ್ಚು ಜನಜಾಗೃತಿ ಮೂಡಿಸುವಂತೆ ತಿಳಿಸಿದರು.
ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮುಂಜಾಗೃತಾ ಕ್ರಮವಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು, ತಹಶೀಲ್ದಾರ್ ಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಬೆಡ್ ಗಳು, ವೈದ್ಯಕೀಯ ಉಪಕರಣಗಳ ಲಭ್ಯತೆ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲೆಯ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್ ಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ