ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಸಭೆ, ರ್ಯಾಲಿ ಹಾಗೂ ಸಮಾವೇಶಗಳಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಚುನಾವಣಾ ಆಯೋಗವು ಪದೇ ಪದೆ ಮಾರ್ಗಸೂಚಿ ಉಲ್ಲಂಘಿಸಿರುವುದು ಕಂಡುಬಂದರೆ ಚುನಾವಣಾ ರ್ಯಾಲಿ, ಸಾರ್ವಜನಿಕ ಸಮಾವೇಶ ಇತ್ಯಾದಿಗಳನ್ನು ನಿಷೇಧಿಸಲು ಕೂಡ ಆಯೋಗ ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಚುನಾವಣಾ ಪ್ರಚಾರಗಳಿಗೆ ಸಂಬಂಧಿಸಿದ ಸಭೆ, ರ್ಯಾಲಿ, ಬಹಿರಂಗ ಸಮಾವೇಶ ಮತ್ತಿತರ ಸಂದರ್ಭಗಳಲ್ಲಿ ಕೋವಿಡ್-19 ಮಾರ್ಗಸೂಚಿ ಸಮರ್ಪಕವಾಗಿ ಪಾಲಿಸದಿರುವುದನ್ನು ಭಾರತ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿರುತ್ತದೆ.
ಈ ಕುರಿತು ಎಲ್ಲ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದಿರುವ ಭಾರತ ಚುನಾವಣಾ ಆಯೋಗವು, ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್-೧೯ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದೆ.
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನರ್ ಇತ್ಯಾದಿ ಬಳಕೆ ಮಾಡುವುದು ಆಯಾ ರಾಜಕೀಯ ಪಕ್ಷ ಮತ್ತು ಅಭ್ಯರ್ಥಿಗಳ ಜವಾಬ್ದಾರಿಯಾಗಿದೆ.
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರ ಕಲಂ 51 ರಿಂದ 60 ಮತ್ತು ಭಾರತೀಯ ದಂಡಸಂಹಿತೆ-1860 ರ ಕಲಂ 188 ರ ಪ್ರಕಾರ ಕ್ರಮ ಕೈಗೊಳ್ಳಬಹುದಾಗಿದೆ.
ಇತ್ತೀಚೆಗೆ ಕೋವಿಡ್-19 ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದರೆ ಚುನಾವಣಾ ಪ್ರಚಾರಗಳಲ್ಲಿ ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆಯಾಗುತ್ತಿರುವುದನ್ನು ಚುನಾವಣಾ ಆಯೋಗವು ಗಮನಿಸಿದೆ.
ಈ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು ಕೋವಿಡ್-19 ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವುದು ಎಲ್ಲ ಜನಪ್ರತಿನಿಧಿಗಳು ಹಾಗೂ ಜನಪ್ರತಿಧಿಯಾಗುವ ಆಕಾಂಕ್ಷಿಯಾಗಿರುವ ಚುನಾವಣಾ ಅಭ್ಯರ್ಥಿಗಳ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದೆ.
ಎಲ್ಲ ಪಕ್ಷಗಳು, ಮುಖಂಡರು ಹಾಗೂ ಜನಪ್ರತಿನಿಧಿಗಳು ಕೋವಿಡ್-19 ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವುದರ ಜತೆಗೆ ರ್ಯಾಲಿ, ಸಮಾವೇಶಗಳಲ್ಲಿ ಭಾಗವಹಿಸುವ ಜನರು ಮಾಸ್ಕ್ ಧರಿಸಿ, ಸೂಕ್ತ ಅಂತರ ಕಾಯ್ದುಕೊಳ್ಳುವುದನ್ನು ಖಚಿತಪಡಿಸಬೇಕು ಎಂದು ಆಯೋಗ ತಿಳಿಸಿದೆ.
ಒಂದು ವೇಳೆ ಯಾವುದೇ ಪಕ್ಷ ಅಥವಾ ಯಾರಾದರೂ ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿರುವುದು ಕಂಡುಬಂದರೆ ಅಂತಹ ಚುನಾವಣಾ ರ್ಯಾಲಿ, ಸಾರ್ವಜನಿಕ ಸಮಾವೇಶ ಇತ್ಯಾದಿಗಳನ್ನು ನಿಷೇಧಿಸಲು ಕೂಡ ಆಯೋಗ ಹಿಂದೇಟು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಆದ್ದರಿಂದ ಬೆಳಗಾವಿ ಲೋಕಸಭಾ ಉಪ ಚುನಾವಣಾ ಪ್ರಚಾರದ ವೇಳೆ ಕೂಡ ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ರ್ಯಾಲಿ, ಸಮಾವೇಶಗಳಲ್ಲಿ ಕಡ್ಡಾಯವಾಗಿ ಕೋವಿಡ್-19 ಮಾರ್ಗಸೂಚಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಚುನಾವಣಾ ಆಯೋಗದ ನಿರ್ದೇಶನದಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆಯನ್ನು ನೀಡಿದ್ದಾರೆ.
ರಾಜ್ಯಕ್ಕೆ ಕಾಲಿಡುವ ಮೊದಲು ಇತಿಹಾಸ ಅರಿತಿರಬೇಕು; ಅರುಣ್ ಸಿಂಗ್ ಗೆ ಸತೀಶ್ ಜಾರಕಿಹೊಳಿ ತಿರುಗೇಟು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ